ADVERTISEMENT

ವಿಜಯಪುರ: ಫಲಾನುಭವಿಗಳಿಗೆ ಸೌಲಭ್ಯ ನೀಡಲು ಕ್ರಮ; ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 7:33 IST
Last Updated 13 ಸೆಪ್ಟೆಂಬರ್ 2020, 7:33 IST
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ   

ವಿಜಯಪುರ: ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಕೂಡಲೇ ಸೌಲಭ್ಯ ನೀಡಲು ಕ್ರಮ ವಹಿಸಲಾಗುವುದುಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಕರ್ನಾಟಕ ರಾಜ್ಯ ಮಾದಿಗ ದಂಡೋರ ಉಪಾಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ತ್ವರಿತವಾಗಿ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಆಯಾ ಶಾಖಾ ವ್ಯವಸ್ಥಾಪಕರು, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಾಬು ಜಗಜೀವನರಾಂ ಅಭಿವೃದ್ಧಿ ನಿಗಮ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಮಹಿಳೆಯರಿಗೆ ಸಿಗಬೇಕಾಗಿರುವ ಸೌಲಭ್ಯಗಳನ್ನು ಅರ್ಹರಿಗೆ ಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಭರವಸೆ ನೀಡಿದರು.

ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ನಿಯಂತ್ರಣ ತಡೆ ಕಾಯಿದೆ ಹಾಗೂ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯೆ ಎಸ್.ರವಿಕಲಾ ಮಾತನಾಡಿ, ವಿಜಯಪುರ ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ 2019-20 ನೇ ಸಾಲಿನಲ್ಲಿ 7 ತಿಂಗಳ ಸಂಬಳ ಇದುವರೆಗೂ ನೀಡಿಲ್ಲ. ಇದರಿಂದ ಕಾರ್ಮಿಕರ ಕುಟುಂಬಗಳು ತೀರಾ ಸಂಕಷ್ಟಕ್ಕೆ ಒಳಗಾಗಿವೆ. ಶೀಘ್ರವಾಗಿ ಅವರಿಗೆ ಸಂಬಳ ಕೊಡಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಈ ಕುರಿತು ದೂರವಾಣಿಯ ಮೂಲಕ ಮುಖ್ಯಾಧಿಕಾರಿಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಅವರು, ಮೂರು ತಿಂಗಳ ಸಂಬಳವನ್ನು ಒಂದು ವಾರದೊಳಗೆ ಬಿಡುಗಡೆ ಮಾಡುವಂತೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.