ADVERTISEMENT

ಗೊರವರ ಉಪ ವರ್ಗ ಪರಿಶಿಷ್ಟ ಪಂಗಡಕ್ಕೆ ಸೇರಿಸಿ: ಪಾರ್ಥಸಾರಥಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 13:52 IST
Last Updated 20 ಏಪ್ರಿಲ್ 2019, 13:52 IST
ಕುರುಬರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾರ್ಥಸಾರಥಿ ಮಾತನಾಡಿದರು
ಕುರುಬರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾರ್ಥಸಾರಥಿ ಮಾತನಾಡಿದರು   

ರಾಮನಗರ: ಕುರುಬ ಸಮುದಾಯದ ಉಪ ಪಂಗಡವಾಗಿರುವ ಗೊರವರ ಉಪ ವರ್ಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಕುರುಬರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾರ್ಥಸಾರಥಿ ತಿಳಿಸಿದರು.

ಇಲ್ಲಿನ ಕುರುಬರ ಸಂಘದ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಗೊರವರ ಉಪವರ್ಗವು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಿಂದೆ ಉಳಿದಿದೆ. ಆದ್ದರಿಂದ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ರಾಜ್ಯ ಸರ್ಕಾರ ಗೊರವರ ಉಪವರ್ಗವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗೆ ಸೇರಿಸಲು ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.

ADVERTISEMENT

17ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ರಚನೆಯಾಗಿರುವ ಮಹಾಮೈತ್ರಿ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಾಮಾಜಿಕ ನ್ಯಾಯದ ಬಗ್ಗೆ ಚಿಂತನೆ ಮಾಡುವ ಯುವ ನಾಯಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಹುದ್ದೆ ಅಲಂಕರಿಸುವುದರಲ್ಲಿ ಯಾವುದೇ ಅನುಮಾವಿಲ್ಲ ಎಂದು ಅವರು ಹೇಳಿದರು.

ಪ್ರಧಾನಿ ಮೋದಿರವರ ಸರ್ವಾಧಿಕಾರಿ ಧೋರಣೆಯಿಂದ ದೇಶದ ಜನರು ರೋಸಿ ಹೋಗಿದ್ದಾರೆ. ವಾಜಪೇಯಿ ಪ್ರಧಾನಿಯಾಗಿದ್ದಾಗ 2004ರಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಬಂದ ಫಲಿತಾಂಶವೇ 2019ರಲ್ಲಿಯೂ ಮರುಕಳಿಸಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕುರುಬ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಾ ಬಂದಿದೆ. ಈ ಹಿಂದೆ ಕುರುಬ ಸಮುದಾಯಕ್ಕೆ ಸೇರಿದ ಹಾಸನ ಮೂಲದ ದೊಡ್ಡೇಗೌಡರನ್ನು ಕಾಂಗ್ರೆಸ್ ಪಕ್ಷ ಕೆಪಿಸಿಸಿ ಅಧ್ಯಕ್ಷ ಸ್ಥಾನಮಾನ ಕೊಟ್ಟು ಜನಾಂಗಕ್ಕೆ ಪ್ರಾತಿನಿಧ್ಯ ನೀಡಿದೆ, ಹಾಗೆಯೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕುರುಬ ಸಮುದಾಯದ ಎಚ್.ವಿಶ್ವನಾಥ್ ಅವರನ್ನು ಹಾಲಿ ಜೆಡಿಎಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಮಾನ ನೀಡಿದ್ದಾರೆ ಎಂದರು.

ಜಾತ್ಯತೀತ ತತ್ವ ಸಿದ್ದಾಂತಗಳನ್ನು ಪಾಲಿಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಹೊಂದಾಣಿಕೆ ಮಾಡಿಕೊಂಡಿರುವುದು ಸ್ವಾಗತಾರ್ಹ. ಈ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲವು ಸಾಧಿಸಲಿದ್ದಾರೆ ಎಂದು ತಿಳಿಸಿದರು.

ಕುರುಬ ಸಮುದಾಯದ ಮುಖಂಡರಾದ ಬಿ.ಬಸವರಾಜು, ಹರಳಪ್ಪ, ಸಿ.ರೇವಣ್ಣ , ಚಂದ್ರಪ್ಪ, ನಾಗರಾಜು, ರಾಮಕೃಷ್ಣಪ್ಪ, ರಾಜೇಶ್ , ಉಮೇಶ್ , ಸಿದ್ದಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.