ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ
ರಾಮನಗರ: ‘ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಂಘ– ಸಂಸ್ಥೆಗಳು ಸಂಘಟಿತವಾಗಿ, ಕೆಲಸ ಮಾಡಿದಾಗ ಮಾತ್ರ, ಮಾನವ ಕಳ್ಳಸಾಗಾಣಿಕೆಯನ್ನು ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯೋನ್ಮುಖವಾಗಬೇಕು’ ಎಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ವಿ. ರೇಣುಕಾ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ. ಪಂ, ಕಾನೂನು ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮುಕ್ತಿ ಒಕ್ಕೂಟ ಕರ್ನಾಟಕ ಹಾಗೂ ಶಾಂತ ಜೀವ ಜ್ಯೋತಿ ಸಂಘಟನೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರತಿ ವರ್ಷ ಜುಲೈ 30ರಂದು ಆಚರಿಸುವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚಣೆಯು, ಕೇಲವ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ಕಳ್ಳಸಾಗಾಣಿಕೆ ಬಗ್ಗೆ ಸಮಾಜದಲ್ಲಿ ಹೆಚ್ಚು ಜಾಗೃತಿ ಮೂಡಿಸಿ, ಇಂತಹದ್ದೊಂದು ಅಮಾನುಷ ಪದ್ದತಿಯ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸುವಂತೆ ಮಾಡಬೇಕು’ ಎಂದು ತಿಳಿಸಿದರು.
‘ಸಂವಿಧಾನದ 23 ಮತ್ತು 24ನೇ ವಿಧಿಯು ಶೋಷಣೆ ವಿರುದ್ಧ ಹಕ್ಕಿನ ಬಗ್ಗೆ ತಿಳಿಸುತ್ತದೆ. ಅದರಂತೆ, ಮಾನವ ಕಳ್ಳಸಾಗಣಿಕೆಯು ಕಾನೂನಿನ ಅನ್ವಯ ಶಿಕ್ಷಾರ್ಹ ಅಪರಾಧ. ಕಳ್ಳಸಾಗಾಣಿಕೆಯಲ್ಲಿ ತಂತ್ರಜ್ಞಾನದ ದುರುಪಯೋಗ ಹಾಗೂ ಕಾಯ್ದೆ– ಕಾನೂನುಗಳ ಕುರಿತು ಶಾಲಾ ಮತ್ತು ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತಾ ಪಿ.ಆರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಬೆಂಗಳೂರು ಮುಕ್ತಿ ಒಕ್ಕೂಟ ಸದಸ್ಯ ಆರ್. ಮನೋಹರ್ ಮಾನವ ಕಳ್ಳ ಸಾಗಣಿಕೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್ ಸ್ವಾಗತಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜಿನಿ ವಂದಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಆರ್. ನಾಗೇಂದ್ರ, ರಾಮನಗರ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ವಿ. ಚಂದ್ರಶೇಖರ್, ಕಾರ್ಯದರ್ಶಿ ತಿಮ್ಮೇಗೌಡ, ಒಕ್ಕೂಟದ ರಾಜೇಂದ್ರನ್ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.