
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿದರು.
ರಾಮನಗರ: ‘ರಾಜ್ಯ ಸರ್ಕಾರದ ಪರಿಸರ ರಾಯಭಾರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅವರು ವಾಸವಿದ್ದ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದಲ್ಲಿ ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ (ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಕಾಯ್ದೆ -2015ರ ಅನುಷ್ಠಾನ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ನಿವೇಶನ ರಹಿತರಿಗಾಗಿ ಗ್ರಾಮದ ಸರ್ವೇ ನಂಬರ್– 127ರಲ್ಲಿ 1 ಎಕರೆ 13 ಗುಂಟೆ ಜಮೀನನ್ನು ಆಶ್ರಯ ಯೋಜನೆಗಾಗಿ ಮಂಜೂರಾತಿ ಮಾಡಲು ಸ್ಥಳ ಗುರುತಿಸಿ, ಅದರ ಪ್ರಸ್ತಾವವನ್ನು ರಾಮನಗರ ಉಪ ವಿಭಾಗಾಧಿಕಾರಿಗೆ ವರದಿ ಸಲ್ಲಿಸಿರುವ ಮಾಹಿತಿ ಇದೆ. ಉಳಿದ ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸಿ ನಿವೇಶನ ವಿತರಣೆಗೆ ತಯಾರಿ ನಡೆಸಬೇಕು’ ಎಂದರು.
‘ನಗರದ ಹೊರವಲಯದ ಅರ್ಚಕರಹಳ್ಳಿ ಗ್ರಾಮದ ಸರ್ವೆ ನಂಬರ್– 104ರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಕಾಯ್ದಿರಿಸಿರುವ 30 ಗುಂಟೆ ಜಮೀನಿಗೆ ಆರ್‌ಟಿಸಿ ಮಂಜೂರಾಗಿದೆ. ಭವನ ನಿರ್ಮಾಣಕ್ಕೆ ಸಂಬಂಧಿಸಿದ ಇಲಾಖೆ ಕೂಡಲೇ ಕ್ರಮ ವಹಿಸಬೇಕು’ ಎಂದು ಸಲಹೆ ನೀಡಿದರು.
‘ಮಾಗಡಿ ತಾಲ್ಲೂಕಿನ ನೇರಳೇಕೆರೆ ಗ್ರಾಮದಲ್ಲಿಅಂಬೇಡ್ಕರ್ ಭವನ ನಿರ್ಮಿಸಲು 10 ಗುಂಟೆ ಜಮೀನನ್ನು ಗುರುತಿಸಬೇಕು. ರಾಮನಗರದ ಪಾಲಾಭೋವಿದೊಡ್ಡಿಯಲ್ಲಿ ಪರಿಶಿಷ್ಟ ಜಾತಿಯವರ ಸ್ಮಶಾನ ಭೂಮಿ ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದೆ. ಭೂ ಮಾಪನ ಇಲಾಖೆಯವರು ಸ್ಮಶಾನವನ್ನು ಸರ್ವೇ ಮಾಡಿ ಒತ್ತುವರಿ ತೆರವುಗೊಳಿಸಬೇಕು’ ಎಂದು ಸೂಚಿಸಿದರು.
‘ದೌರ್ಜನ್ಯ ಸಂತ್ರಸ್ತರಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಕಲ್ಪಿಸಿ ಕೊಡಬೇಕು. ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಕುರಿತು ಅರಿವು ಮೂಡಿಸಬೇಕು. ಠಾಣೆಗೆ ಬರುವವರಿಗೆ ಕಾಯ್ದೆಯ ವಿವರ ಕುರಿತ ಕರಪತ್ರಗಳನ್ನು ಹಂಚಬೇಕು’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಉಪವಿಭಾಗಾಧಿಕಾರಿ ಬಿನೋಯ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಚೆಲುವರಾಜು, ಕುಂಬಾಪುರ ಬಾಬು, ಗೋಪಾಲ ಕೃಷ್ಣ, ಮಹೇಶ್, ಶಿವಣ್ಣ, ಶಿವಕುಮಾರ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಜಿಲ್ಲಾ ಅಥವಾ ತಾಲ್ಲೂಕು ಕಚೇರಿಗಳಿಗೆ ತಮ್ಮ ಸಮಸ್ಯೆ ಪರಿಹಾರಕ್ಕೆಂದು ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಸಮಸ್ಯೆಗಳನ್ನು ಅಧಿಕಾರಿಗಳು ಆಲಿಸಬೇಕು. ದೂರನ್ನು ನಿರ್ಲಕ್ಷ್ಯಿಸದೆ ಕಾನೂನು ವ್ಯಾಪ್ತಿಯಲ್ಲಿ ಇತ್ಯರ್ಥಪಡಿಸಬೇಕು– ಯಶವಂತ್ ವಿ. ಗುರುಕರ್ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.