ರಾಮನಗರ: ತಾಲ್ಲೂಕಿನ ಕೈಲಾಂಚದಲ್ಲಿ ಬೆಳಿಗ್ಗೆ ಹಾಲು ಕರೆಯಲು ಕೊಟ್ಟಿಗೆಗೆ ತೆರಳಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ. ಗ್ರಾಮದ ಚಿಕ್ಕಬೋರಯ್ಯ ದಾಳಿಗೊಳಗಾದವರು. ಅವರ ತಲೆ, ಹೊಟ್ಟೆ ಹಾಗೂ ಕೈಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಲಾಗಿದೆ.
ಚಿಕ್ಕಬೋರಯ್ಯ ಅವರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಕೊಟ್ಟಿಗೆಯಲ್ಲಿ ಹಸುವಿನ ಹಾಲು ಕರೆಯಲು ಹೋದಾಗ, ಅಲ್ಲೇ ಇದ್ದ ಕರಡಿ ಏಕಾಏಕಿ ದಾಳಿ ನಡೆಸಿದೆ. ನೋವಿನಿಂದ ಅವರು ಜೋರಾಗಿ ಕಿರುಚಿಕೊಂಡಾಗ, ಮನೆಯವರು ಓಡಿ ಬಂದಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.
ಜಿಲ್ಲಾಸ್ಪತ್ರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ ಅವರು ಭೇಟಿ ನೀಡಿ, ಚಿಕ್ಕಬೋರಯ್ಯ ಅವರ ಆರೋಗ್ಯ ವಿಚಾರಿಸಿದರು. ಕೈಲಾಂಚ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕರಡಿ ಹಾವಳಿ ಹೆಚ್ಚಾಗಿದೆ. ಜನರ ಮೇಲೆ ಏಕಾಏಕಿ ದಾಳಿ ನಡೆಸುವುದರಿಂದ ರೈತರು ಜಮೀನುಗಳಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಕರಡಿಗಳಿಗೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.