
ರಾಮನಗರ: ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು ಅನುಷ್ಠಾನ ವಿಚಾರದಲ್ಲಿ ರೈತರಿಗೆ ತೊಂದರೆ ಕೊಡಬೇಕು ಎನ್ನುವ ದುರುದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
ನಗರದಲ್ಲಿ ಶನಿವಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ರೈತರ ಮಾಹಿತಿಗಾಗಿ ಹೊರ ತಂದಿರುವ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು.
ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆಯೇ ಹೊರತು; ಈ ಯೋಜನೆಯನ್ನು ಜಿದ್ದಿನ ಮೂಲಕ ಅನುಷ್ಠಾನ ಮಾಡಲು ಮುಂದಾಗುತ್ತಿಲ್ಲ. ಈ ವಿಷಯವನ್ನು ರೈತರು ಅರ್ಥ ಮಾಡಿಕೊಳ್ಳಬೇಕು ಎಂದರು.
2006ರಲ್ಲಿ ಈ ಯೋಜನೆಗೆ ಚಾಲನೆ ಸಿಕ್ಕಿತ್ತು. ಅಂದಿನ ಬಿಡದಿ ಟೌನ್ ಶಿಪ್ ಯೋಜನೆಗೆ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಎಂದು ಹೊಸ ರೂಪ ನೀಡಲಾಗಿದೆ. ರೈತರು ವಸ್ತುಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಈ ಯೋಜನೆಯಲ್ಲಿ ಯಾವುದೇ ರೀತಿಯ ಮದ್ಯವರ್ತಿಗಳಿಲ್ಲ. ರೈತರಿಗೆ ಸಂದೇಹಗಳಿದ್ದರೆ ಸಹಾಯವಾಣಿ ಸಂಖ್ಯೆ 7259198192 ಸಂಪರ್ಕಿಸಬಹುದು. ಅಧಿಕಾರಿಗಳು ನೇರವಾಗಿ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.
ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಮುಂದಿನ ದಿನಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಸಭೆ ಮಾಡಲಾಗುವುದು. ರೈತರು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಅರ್ಜಿ ನೀಡಿದರೆ ಅದನ್ನು ಸಭೆಯಲ್ಲಿ ಚರ್ಚಿಸಿ ಪರಿಹಾರ ಸೂಚಿಸಲಾಗುವುದು. ಯೋಜನೆ ವಿರೋಧಿಸಿ ಬಿಡದಿ ಸಮೀಪದ ಬೈರಮಂಗಲದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಶೀಘ್ರವೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಮಾತನಾಡಿ, ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಬಗ್ಗೆ ರೈತರು ಸಮರ್ಪಕವಾಗಿ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಧಿಕಾರದ ಹೆಚ್ಚುವರಿ ಆಯುಕ್ತ ಮಾರುತಿ ಪ್ರಸನ್ನ, ಪ್ರಾಧಿಕಾರದ ನಿರ್ದೇಶಕರು, ರೈತರು ಭಾಗವಹಿಸಿದ್ದರು.
ನಿರುದ್ಯೋಗಿ ಯುವಕ ಯುವತಿಯರಿಗೆ ಕೌಶಲ ತರಬೇತಿ ನೀಡಿ ಉದ್ಯೋಗ ಕೊಡಿಸಲಾಗುವುದು ಎಂದು ಬಾಲಕೃಷ್ಣ ಭರವಸೆ ನೀಡಿದರು. ಕೌಶಲ ಮತ್ತು ಉದ್ಯೋಗ ಕೇಂದ್ರ ತೆರೆಯಲು ಈಗಾಗಲೇ ಜಾಗ ಗುರುತಿಸಲಾಗಿದೆ. ಜೋಗರದೊಡ್ಡಿಯಲ್ಲಿ ನಿರ್ಮಿತಿ ಕೇಂದ್ರದವರು ಜಾಗ ನೀಡಿದ್ದಾರೆ. ಶೀಘ್ರವೇ ಅಲ್ಲಿ ತರಬೇತಿ ಕೇಂದ್ರ ಪ್ರಾರಂಭವಾಗಲಿದೆ. ಯುವಕ–ಯುವತಿಯರಿಗೆ ವಿದ್ಯಾರ್ಹತೆಗೆ ತಕ್ಕಂತೆ ತರಬೇತಿ ನೀಡಲಾಗುತ್ತದೆ. ತರಬೇತಿ ನೀಡಿದ ನಂತರ ಬಿಡದಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಉದ್ಯೋಗ ಕೊಡಿಸುವ ಕೆಲಸ ಮಾಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.