ADVERTISEMENT

ರಾಮನಗರ ವಿಧಾನಸಭಾ ಉಪಚುನಾವಣೆ: ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸೂಚನೆ

ಚುನಾವಣಾ ವೀಕ್ಷಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2018, 13:32 IST
Last Updated 20 ಅಕ್ಟೋಬರ್ 2018, 13:32 IST
ಚುನಾವಣಾ ವೀಕ್ಷಕಿ ವಿ. ಲಲಿತಾಲಕ್ಷ್ಮಿ ನೇತೃತ್ವದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಯಿತು
ಚುನಾವಣಾ ವೀಕ್ಷಕಿ ವಿ. ಲಲಿತಾಲಕ್ಷ್ಮಿ ನೇತೃತ್ವದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಯಿತು   

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿಯೋಜಿತರಾಗಿರುವ ಪ್ರತಿಯೊಬ್ಬ ಅಧಿಕಾರಿಯೂ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಚುನಾವಣಾ ವೀಕ್ಷಕಿ ವಿ. ಲಲಿತಾಲಕ್ಷ್ಮಿ ಹೇಳಿದರು.

ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಶನಿವಾರ ನಡೆದ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣೆಯನ್ನು ಶೇ 100ರಷ್ಟು ಪಾರದರ್ಶಕವಾಗಿ, ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಬ್ಯಾನರ್, ಪೋಸ್ಟರ್, ಬಂಟಿಂಗ್ ಕಂಡುಬಂದಿಲ್ಲ. ಚುನಾವಣಾ ಆಯೋಗದ ಕಾರ್ಯಸೂಚಿ ಅನ್ವಯ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಕ್ಯಾಪ್ಟನ್ ಕೆ. ರಾಜೇಂದ್ರ ಮಾತನಾಡಿ ಕಳೆದ ಬಾರಿಯಂತೆ ಈ ಬಾರಿಯೂ ಉಪಚುನಾವಣೆಯಲ್ಲಿ ಉತ್ತಮ ಕೆಲಸ ನಿರ್ವಹಿಸಬೇಕು. ವಾಹನಗಳ ತಪಾಸಣಾ ಸಮಯದಲ್ಲಿ ಕಡ್ಡಾಯವಾಗಿ ಹ್ಯಾಂಡಿ ಕ್ಯಾಮೆರಾಗಳನ್ನು ಬಳಸಿ ಸಂಪೂರ್ಣವಾಗಿ ಚಿತ್ರೀಕರಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈ ಮುಹಿಲನ್‌ ಮಾತನಾಡಿ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇದು ರಾಜಕೀಯವಾಗಿ ಸೂಕ್ಷ್ಮ ಕ್ಷೇತ್ರವಾಗಿದ್ದು, ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು, ರಾಜಕೀಯ ಪಕ್ಷಗಳ ಪ್ರಚಾರ ಇನ್ನೂ ಪ್ರಖರ ಪಡೆದಿಲ್ಲ, ಮುಂಬರುವ 10 ದಿನಗಳಲ್ಲಿ ಬಹಳ ಎಚ್ಚರಿಕೆಯಿಂದ ಕೆಲಸಮಾಡಬೇಕು ಎಂದರು.

ಚುನಾವಣೆಯಲ್ಲಿ ಚುನಾವಣಾ ಆಯೋಗ ನೀಡುವ ಸೂಚನೆಗಳನ್ನು ಗಂಭೀರವಾಗಿ ಪಾಲಿಸುವುದಷ್ಟೇ ನಮ್ಮ ಕೆಲಸ. ಹಣ, ಅಕ್ರಮ ಮದ್ಯ ಕಂಡುಬಂದಲ್ಲಿ ಚುನಾವಣಾ ಪ್ರಕ್ರಿಯೆಗಳಲ್ಲಿ ಅನುಗುಣವಾಗುವಂತೆ ಅವುಗಳನ್ನು ವಶಕ್ಕೆ ಪಡೆಯಬೇಕು ಎಂದರು.

ಚೆಕ್‌ ಪೋಸ್ಟ್‌ಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಟಾರ್ಚ್ ಲೈಟ್, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ, ತಪಾಸಣೆಯಲ್ಲಿ ಪ್ರಯಾಣಿಕರಿಗೆ ಅನಗತ್ಯವಾಗಿ ಕಿರುಕುಳ ನೀಡಬಾರದು. ಚೆಕ್‌ ಪೋಸ್ಟ್‌್ ಗಳಿಗೆ ಇನ್ನು ಮುಂದೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದರು.

ವೆಚ್ಚ ವೀಕ್ಷಕ ರಾಜ್‌ಕರಣ್‌ ವರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಆರ್. ಪ್ರಶಾಂತ್, ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.