ADVERTISEMENT

ಚನ್ನಪಟ್ಟಣ: ಗೆಲುವಿಗೆ ತ್ರಿಪಕ್ಷಗಳ ಪೈಪೋಟಿ

31 ವಾರ್ಡ್‌ನಲ್ಲಿ ಜೆಡಿಎಸ್, ಕಾಂಗ್ರೆಸ್ ಸ್ಪರ್ಧೆ: 21 ಸ್ಥಾನಗಳಿಗೆ ಬಿಜೆಪಿ ಸೀಮಿತ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 3:00 IST
Last Updated 27 ಏಪ್ರಿಲ್ 2021, 3:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚನ್ನಪಟ್ಟಣ: ನಗರಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ರಾಜಕೀಯ ಪಕ್ಷಗಳು ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದು, ಗೆಲುವಿ ಗಾಗಿ ತೀವ್ರ ಪೈಪೋಟಿ ನಡೆಸುತ್ತಿವೆ.

ಪಟ್ಟಣದ 31 ವಾರ್ಡ್‌ಗಳಲ್ಲಿ ಗೆಲುವಿಗಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಪಕ್ಷೇತರರು, ಎಸ್.ಡಿ.ಪಿ.ಐ. ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ನಡುವೆ ಸ್ಪರ್ಧೆ ಏರ್ಪಟ್ಟಿದೆ.

ಪಟ್ಟಣದ 31 ವಾರ್ಡ್‌ಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಎಲ್ಲ ವಾರ್ಡ್ ಗಳಲ್ಲಿಯೂ ಸ್ಪರ್ಧಿಸಿದ್ದರೆ, ಬಿಜೆಪಿ ಕೇವಲ 21 ವಾರ್ಡ್‌ಗಳಲ್ಲಿ ಮಾತ್ರ ಸ್ಪರ್ಧಿಸಿದೆ. ಉಳಿದಂತೆ ಎಸ್.ಡಿ.ಪಿ.ಐ. ಮತ್ತು ಆಮ್‌ಆದ್ಮಿ ಪಕ್ಷದ ಅಭ್ಯರ್ಥಿಗಳು ತಲಾ ಐದು ವಾರ್ಡ್‌ಗಳಲ್ಲಿ ಸ್ಪರ್ಧಿಸಿದ್ದಾರೆ.

ADVERTISEMENT

ಮೇಲ್ನೋಟಕ್ಕೆ ಎಲ್ಲ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧೆ ನೀಡುವಂತೆ ಕಂಡುಬಂದರೂ ಕೆಲವು ವಾರ್ಡ್‌ಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ, ಕೆಲವು ವಾರ್ಡ್‌ಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿರುವುದು ಸುಳ್ಳಲ್ಲ. ಕೆಲವು ಕಡೆ ಪಕ್ಷೇತರರು ತೀವ್ರ ಸ್ಪರ್ಧೆ ಒಡ್ಡುತ್ತಿದ್ದಾರೆ. ಕೆಲವು ವಾರ್ಡ್‌ಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

2013ರಲ್ಲಿ ನಡೆದಿದ್ದ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆದಿತ್ತು. 31 ವಾರ್ಡ್‌ಗಳಲ್ಲಿ ಜೆಡಿಎಸ್ 15 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. 14 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಬಿ.ಎಸ್.ಆರ್. ಪಕ್ಷದಿಂದ ಒಬ್ಬರು ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು.

ಜೆಡಿಎಸ್ 15 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದರೂ ಅಧಿಕಾರ ಹಿಡಿಯುವಲ್ಲಿ ಸೋತಿತ್ತು. ಬಿ.ಎಸ್.ಆರ್. ಮತ್ತು ಪಕ್ಷೇತರ ಅಭ್ಯರ್ಥಿಯ ನೆರವಿನಿಂದ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಆಗ ಕಾಂಗ್ರೆಸ್ ಶಾಸಕರಾಗಿದ್ದ ಕಾರಣ ಕಾಂಗ್ರೆಸ್‌ಗೆ ಅಧಿಕಾರ ಕೊಡಿಸುವಲ್ಲಿ ಶ್ರಮಿಸಿದ್ದರು.

ಆದರೆ, ಈ ಬಾರಿ ಯೋಗೇಶ್ವರ್ ಬಿಜೆಪಿಯಲ್ಲಿದ್ದಾರೆ. ಇದರ ಜೊತೆಗೆ ಬಿಜೆಪಿ ಸರ್ಕಾರದಲ್ಲಿ ಪ್ರಭಾವಿ ಸಚಿವರು ಎಂದು ಗುರುತಿಸಿಕೊಂಡಿರುವುದರಿಂದ ಸಹಜವಾಗಿ ಈ ಬಾರಿ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಬಿಜೆಪಿ ಸಹ ತಾಲ್ಲೂಕಿನಲ್ಲಿ ಬಲಿಷ್ಠವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವುದು ಖಚಿತವಾಗಿದೆ.

ಮೂರೂ ಪಕ್ಷಗಳಿಗೂ ನಗರಸಭಾ ಚುನಾವಣೆ ಪ್ರತಿಷ್ಠೆಯ ವಿಷಯವಾಗಿರುವುದರಿಂದ ಕೊರೊನಾ ಆತಂಕದ ನಡುವೆಯೂ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮತದಾನಕ್ಕೆ ಕ್ಷಣಗಣನೆ ಆರಂಭವಾದಂತೆಲ್ಲಾ ಅಭ್ಯರ್ಥಿಗಳು ಗೆಲುವಿಗಾಗಿ ತೀವ್ರ ಕಸರತ್ತು ನಡೆಸಿದ್ದು, ಪಕ್ಷಕ್ಕಿಂತಲೂ ತಮ್ಮ ವೈಯಕ್ತಿಕ ಪ್ರತಿಷ್ಠೆಯ ಆಧಾರದ ಮೇಲೆ ಚುನಾವಣೆ ಎದುರಿಸುತ್ತಿರುವುದು ಸುಳ್ಳಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.