ಚನ್ನಪಟ್ಟಣ: ತಾಲ್ಲೂಕಿನ ನಾಗವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಟಿ.ರಾಮಚಂದ್ರಪ್ಪ ಅವರಿಗೆ 2025ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದ್ದು, ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆಯಲಿದ್ದಾರೆ.
ರಾಮಚಂದ್ರಪ್ಪ ಅವರು 1990ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಾತಿಗೊಂಡು ಚನ್ನಪಟ್ಟಣ ತಾಲ್ಲೂಕಿನ ರಾಮನರಸಿಂಹರಾಜಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿ, ಆನಂತರ ಚನ್ನಪಟ್ಟಣ ನಗರದ ಪಠಣವಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮುಖ್ಯಶಿಕ್ಷಕರಾಗಿ ಪದೋನ್ನತಿ ಹೊಂದಿದ್ದರು.
ಕನಕಪುರ ತಾಲ್ಲೂಕಿನ ಸೋಮೆದ್ಯಾಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ, 2009 ರಲ್ಲಿ ನಾಗವಾರ ಶಾಲೆಗೆ ವರ್ಗಾವಣೆಗೊಂಡು ಸತತ 16 ವರ್ಷಗಳಿಂದ ನಾಗವಾರ ಸರ್ಕಾರಿ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನಾಗವಾರ ಶಾಲೆಗೆ ಟೊಯೊಟಾ ಕಂಪನಿ ಸಹಯೋಗದಲ್ಲಿ ಶಾಲೆಗೆ ಉತ್ತಮ ಕಟ್ಟಡ ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಉತ್ತಮ ಶಾಲಾ ಪರಿಸರ, ಕಲಿಕಾ ವಾತಾವರಣ ನಿರ್ಮಾಣ. ತಂತ್ರಜ್ಞಾನ ಆಧಾರಿತ ಕಲಿಕೆಗೆ ಒತ್ತು. ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಶೌಚಾಲಯ, ಕುಡಿಯುವ ನೀರು, ಪೀಠೋಪಕರಣ, ಸಿಸಿಟಿವಿ ಕ್ಯಾಮೆರಾ ಮೊದಲಾದವುಗಳನ್ನು ಒದಗಿಸುವಲ್ಲಿ ಶ್ರಮಿಸಿದ್ದಾರೆ. ಇವರ ಈ ಶೈಕ್ಷಣಿಕ ಸೇವೆ ಗುರುತಿಸಿ ಸರ್ಕಾರ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ರಾಮಚಂದ್ರಪ್ಪ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ, ಶಿಕ್ಷಣ ಇಲಾಖೆಯ ಅಧಿಕಾರಿ ವೃಂದ, ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಗೌರವಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.