
ಚನ್ನಪಟ್ಟಣ: ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಹಾಗೂ ಕನ್ನಿದೊಡ್ಡಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ಕ್ರಮ ಖಂಡಿಸಿ ಗ್ರಾಮಸ್ಥರು ಹಾಗೂ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಪದಾಧಿಕಾರಿಗಳು ಶನಿವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಹೊಂಗನೂರು ಕೆಪಿಎಸ್ ಮ್ಯಾಗ್ನೇಟ್ ಶಾಲೆಗೆ ವಿಲೀನ ಮಾಡುವ ಹೆಸರಿನಲ್ಲಿ ಈ ಎರಡೂ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ಖಂಡನೀಯ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಸ್ಥಳೀಯವಾಗಿ ಹಲವು ಸಮಸ್ಯೆಗಳು ಎದುರಾಗುತ್ತವೆ. ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳು, ಪೋಷಕರು ಸಂಕಷ್ಟಕ್ಕೆ ಈಡಾಗುತ್ತಾರೆ. ಸರ್ಕಾರ ಈ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಂಘಟನೆ ರಾಜ್ಯ ಕಾರ್ಯದರ್ಶಿ ನವಾಜ್, ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯ ವಿನಯ್ ಚಂದ್ರ, ಜಿಲ್ಲಾ ಸಂಚಾಲಕ ರೋಹಿತ್, ಹೊಡಿಕೆ ಹೊಸಹಳ್ಳಿ ಗ್ರಾಮಸ್ಥರಾದ ನಯನ್, ಶ್ರೀಕಂಠಯ್ಯ, ಸಾರಥಿ, ಗೀತಾ, ರಾಧಾ, ಕನ್ನಿದೊಡ್ಡಿ ಗ್ರಾಮಸ್ಥರಾದ ಗೋವಿಂದರಾಜು, ರಮ್ಯಾ, ದಾಸಪ್ಪ, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.