ರಾಮನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಪದಾಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರದ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು
ರಾಮನಗರ: ‘ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ಮೇ 27ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದೆ. ಪೌರ ಕಾರ್ಮಿಕರು, ಲೋಡರ್‌ಗಳು, ಕ್ಲೀನರ್‌ಗಳು, ನೀರು ಸರಬರಾಜುದಾರರು, ಯುಜಿಡಿ, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ಸಂಘದಡಿ ಬರುವ ಎಲ್ಲಾ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಆರ್. ನಾಗರಾಜು ಹೇಳಿದರು.
‘27ರಿಂದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹ, ವಿಲೇವಾರಿ, ಸ್ವಚ್ಛತಾ ಕೆಲಸ, ಕುಡಿಯುವ ನೀರು ಸರಬರಾಜು, ಯುಜಿಡಿ ನಿರ್ವಹಣೆ, ಉದ್ಯಾನ ನಿರ್ವಹಣೆ ಸೇರಿದಂತೆ ಎಲ್ಲಾ ರೀತಿಯ ಕೆಲಸಗಳನ್ನು ಬಂದ್ ಮಾಡಲಾಗುವುದು. ನಮ್ಮ ಬೇಡಿಕೆ ಈಡೇರುವವರೆಗೆ ಯಾರೂ ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಸ್ಥಳೀಯ ಸಂಸ್ಥೆಗಳ ಎದುರು ಸಂಘದ ವತಿಯಿಂದ ಧರಣಿ ನಡೆಸಲಾಗುವುದು’ ಎಂದು ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮನವಿಗೆ ಸ್ಪಂದಿಸಿಲ್ಲ: ‘ನ್ಯಾಯಯುತವಾದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಂಘವು ಇದುವರೆಗೆ ಮುಖ್ಯಮಂತ್ರಿ, ಪೌರಾಡಳಿತ ಸಚಿವರು, ನಗರಾಭಿವೃದ್ಧಿ ಸಚಿವರು, ಇಲಾಖೆಗಳ ಕಾರ್ಯದರ್ಶಿ, ಪೌರಾಡಳಿತ ನಿರ್ದೇಶಕರು ಸೇರಿದಂತೆ ವಿವಿಧ ಹಂತಗಳ ಅಧಿಕಾರಿಗಳನ್ನು ಹಲವು ಬಾರಿ ಭೇಟಿ ಮಾಡಿ ಮನವಿ ಕೊಟ್ಟಿದೆ. ಇದುವರೆಗೆ ನಮ್ಮ ಮನವಿಗೆ ಯಾರೂ ಸ್ಪಂದಿಸದಿರುವುದರಿಂದ ಅನಿವಾರ್ಯವಾಗಿ ಅನಿರ್ದಿಷ್ಟಾವಧಿ ಮುಷ್ಕರ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಹೇಳಿದರು.
‘ರಾಮನಗರದಲ್ಲಿ ಏಪ್ರಿಲ್ 6ರಂದು ರಾಜ್ಯ ಪರಿಷತ್ತಿನ ಕಾರ್ಯಕಾರಣಿ ಸಭೆ ನಡೆಸಿದ್ದ ಸಂಘವು, ಬೇಡಿಕೆಗಳ ಈಡೇರಿಕೆಗಾಗಿ ನಿರ್ಣಯ ಕೈಗೊಂಡಿತ್ತು. ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಿ ಈಡೇರಿಕೆಗಾಗಿ 45 ದಿನಗಳ ಗಡುವು ನೀಡಿ ಸಾಂಕೇತಿಕ ಪ್ರತಿಭಟನೆ ಆರಂಭಿಸಿತ್ತು. ರಾಜ್ಯದಾದ್ಯಂತ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವ ಜೊತೆಗೆ, ಮೇಣದಬತ್ತಿ ಮತ್ತು ಪಂಜಿನ ಮೆರವಣಿಗೆ ನಡೆಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೂ ಸಂಘದಿಂದ ಮನವಿ ನೀಡಲಾಗಿತ್ತು. ಆದರೂ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ’ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ವಿ. ವೆಂಕಟೇಶ್, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ, ಮಾಗಡಿ ಅಧ್ಯಕ್ಷ ಆರ್. ರವಿಕುಮಾರ್, ಉಪಾಧ್ಯಕ್ಷ ಗಿರೀಶ್, ಕನಕಪುರ ಅಧ್ಯಕ್ಷ ಜನಾರ್ಧನ್, ನೇರ ಪಾವತಿ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಎಲ್. ಚಂದ್ರಶೇಖರ್, ಉಪಾಧ್ಯಕ್ಷ ಶೇಖರ್, ವಾಹನ ಚಾಲಕರ ಸಂಘದ ಅಧ್ಯಕ್ಷ ಆನಂದ, ಬಾಬಾ ತಾಜುದ್ದೀನ್, ಹೊರಗುತ್ತಿಗೆ ಲೋಡರ್‌ಗಳಾದ ಶಂಕರ್, ಶಿವರಾಜ, ನೀರು ಸರಬರಾಜು ನೌಕರರಾದ ಪ್ರಕಾಶ್, ಮುತ್ತುರಾಜು, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರ ಸಂಘದ ಆನಂದ, ರಮೇಶ್, ಪದಾಧಿಕಾರಿಗಳಾದ ಶ್ರೀನಿವಾಸ್, ದೇವೇಂದ್ರ, ದಸ್ತಗಿರಿ, ವೆಂಕಟರಮಣ ಹಾಗೂ ಇತರರು ಇದ್ದರು.
ಸಂಘದ ಬೇಡಿಕೆಗಳೇನು?
* ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.
* ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯದ ಜ್ಯೋತಿ ಸಂಜೀವಿನಿ ಯೋಜನೆಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು.
* ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜುದಾರರು, ವಾಹನ ಚಾಲಕರು, ಲೋಡರ್‌ಗಳು, ಕ್ಲೀನರ್‌ಗಳು, ಸ್ವಚ್ಛತಾ ಮೇಲ್ವಿಚಾರಕರು, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರನ್ನು ನೇರ ಪಾವತಿಗೆ ಒಳಪಡಿಸಬೇಕು.
* ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಾಮಾನ್ಯ ವೇತನ ಟೈಮ್ ಸ್ಕೆಲ್ ನೌಕರರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು.
* ವಾಹನ ಚಾಲಕರು, ನೀರು ಪೂರೈಕೆ ನೌಕರರು, ನೇರ ಪಾವತಿ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು.
* ಪೌರ ಕಾರ್ಮಿಕರಿಗೆ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು.
ಎ.ಸಿ ಕಚೇರಿಯಲ್ಲಿ ಕೆಲಸ ಮಾಡುವವರಿಗೆ ಸರ್ಕಾರ ನಗದು ರಹಿತ ಆರೋಗ್ಯ ಸಂಜೀವಿನಿ ಚಿಕಿತ್ಸೆ ಸೌಲಭ್ಯ ನೀಡುತ್ತದೆ. ಮಳೆ, ಗಾಳಿ, ಬಿಸಿಲು ಲೆಕ್ಕಿಸದೆ ಕೆಲಸ ಮಾಡುವ ಪೌರ ನೌಕರಿರಗೆ ಸೌಲಭ್ಯ ನೀಡಲು ಮೀನ–ಮೇಷ ಎಣಿಸುತ್ತಿದೆ.– ಆರ್. ನಾಗರಾಜು, ರಾಜ್ಯ ಉಪಾಧ್ಯಕ್ಷ, ಕರ್ನಾಟಕ ಪೌರ ನೌಕರರ ಸಂಘ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.