ADVERTISEMENT

ಚನ್ನಪಟ್ಟಣ: ಪ್ರಧಾನಿ ಮೋದಿ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 4:29 IST
Last Updated 10 ಫೆಬ್ರುವರಿ 2026, 4:29 IST
ಚನ್ನಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಎದುರು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದರು
ಚನ್ನಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಎದುರು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದರು   

ಚನ್ನಪಟ್ಟಣ: ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಮಾಡಿಕೊಳ್ಳುತ್ತಿರುವ ಒಪ್ಪಂದ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ನಗರದ ಸರ್ಕಾರಿ ಬಸ್ ನಿಲ್ದಾಣದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಬಾವುಟಗಳನ್ನು ಹಿಡಿದು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ದುರಾಡಳಿತದಿಂದ ದೇಶ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಹೆಸರು ಪಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಸಾಗರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದು ಸೂಕ್ತವಾದ ನಿರ್ಧಾರವಲ್ಲ. ಇದರಿಂದ ಅಮೆರಿಕ ರಾಷ್ಟ್ರಕ್ಕೆ ಅನುಕೂಲವಾಗುತ್ತದೆಯೇ ಹೊರತು ಭಾರತಕ್ಕೆ ಯಾವುದೇ ರೀತಿಯ ಅನುಕೂಲ ಇಲ್ಲ. ಕಷ್ಟಕಾಲದಲ್ಲಿ ಭಾರತದ ಕೈ ಹಿಡಿದಿದ್ದ ರಷ್ಯಾ ದೇಶವನ್ನು ಬಿಟ್ಟು ಟ್ರಂಪ್ ಜತೆಗೆ ಒಪ್ಪಂದ ಮಾಡಿಕೊಂಡಿರುವುದು ಖಂಡನೀಯ ಎಂದು ಕಿಡಿಕಾರಿದರು.

ADVERTISEMENT

ಇದರ ಜೊತೆಗೆ ಅಮೆರಿಕ ಮೂಲದ ಎಪ್‌ಸ್ಟೈನ್ ಎಂಬ ಲೈಂಗಿಕ ಅಪರಾಧಿ ಫೈಲ್ಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಕೇಳಿ ಬರುತ್ತಿದೆ. ಲೈಂಗಿಕ ದಂಧೆಕೋರನಾಗಿರುವ ಆತನ ಹೆಸರಿನ ಜೊತೆ ಮೋದಿ ಅವರ ಹೆಸರು ಥಳಕು ಹಾಕಿಕೊಂಡಿದೆ. ಇದೆಲ್ಲದರ ಬಗ್ಗೆ ಅವರು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.