
ರಾಮನಗರ: ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಘೋಷವಾಕ್ಯದೊಂದಿಗೆ ಶುಕ್ರವಾರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮತ ಕಳವು ವಿರುದ್ಧ ಪ್ರತಿಭಟನಾ ಜಾಥಾ ನಡೆಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ನಡೆಸಿ ನಂತರ ಜಾಥಾಕ್ಕೆ ಚಾಲನೆ ನೀಡಲಾಯಿತು. ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಜಾಥಾ ಮೈಸೂರು ಬೆಂಗಳೂರು ರಸ್ತೆಯಲ್ಲಿ ಸಾಗಿ, ಐಜೂರು ವೃತ್ತ, ಹಳೆ ಬಸ್ ನಿಲ್ದಾಣ ಮಾರ್ಗವಾಗಿ ಕೆಂಗಲ್ ಹನುಮಂತಯ್ಯ ವೃತ್ತದ ಕಡೆಯಿಂದ ಮತ್ತೆ ಕಾಂಗ್ರೆಸ್ ಕಚೇರಿವರೆಗೂ ಸಂಚರಿಸಿತು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ದೇಶದಾದ್ಯಂತ ಮತ ಕಳವು ಮಾಡಿ ವಾಮಮಾರ್ಗದಿಂದ ಅಧಿಕಾರದಲ್ಲಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಜಾಥಾ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ಉಳಿಸಿ ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ನಡೆಸುತ್ತಿರುವ ಅಭಿಯಾನ ಇದು. ರಾಹುಲ್ ಗಾಂಧಿ ಮತ ಕಳ್ಳತನದ ವಿಷಯವನ್ನು ದೇಶದ ಜನರ ಮುಂದೆ ಪುರಾವೆ ಇಟ್ಟಿದ್ದಾರೆ. ಆದರೂ, ಚುನಾವಣಾ ಆಯೋಗ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ ಮಾತನಾಡಿ, ಮತ ಕಳ್ಳತನ ಪ್ರಜಾಪ್ರಭುತ್ವದ ಮೂಲತತ್ವದ ಮೇಲಿನ ದಾಳಿಯಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕಿದ್ದು ದೋಷರಹಿತ ಮತದಾರರ ಪಟ್ಟಿ ಆಗಬೇಕಿದೆ ಎಂದು ಒತ್ತಾಯಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು., ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಎಚ್.ರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ದುಂತೂರು ವಿಶ್ವನಾಥ್, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಪುಟ್ಟರಾಜು, ಸೇವಾದಳ ಜಿಲ್ಲಾಧ್ಯಕ್ಷ ಚಂದ್ರು, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಸಾಗರ್, ನಗರಸಭೆ ಸದಸ್ಯರಾದ ಪಾರ್ವತಮ್ಮ, ನಾಗಮ್ಮ, ಸಮದ್, ಭೈರೇಗೌಡ, ಮುಖಂಡರಾದ ಸಿಎನ್‌ಆರ್ ವೆಂಕಟೇಶ್, ರಮೇಶ್, ಮಲುವೇಗೌಡ, ಕೋಕಿಲರಾಣಿ, ಗುರುಪ್ರಸಾದ್, ವೆಂಕಟೇಶ್, ಶಫಿ, ವಸೀಂ, ಷಡಕ್ಷರಿ, ಭೂಷಣ್, ವಿನಯ್ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.