ADVERTISEMENT

ರಾಮನಗರ: ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 4:36 IST
Last Updated 25 ಜೂನ್ 2022, 4:36 IST
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು   

ರಾಮನಗರ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಪದಾಧಿಕಾರಿಗಳು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಭೂಮಿ, ವಸತಿ, ವಿದ್ಯಾರ್ಥಿ ವೇತನ, ಹಾಸ್ಟೆಲ್‌ಗಳಿಗೆ ಮೂಲ ಸೌಲಭ್ಯ, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ, ನಾಗರಿಕ ಹಕ್ಕು ಜಾರಿ ದಳಕ್ಕೆ ರಕ್ಷಣಾತ್ಮಕ ಅಧಿಕಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕೇಂದ್ರ ಹಾಗೂ ರಾಜ್ಯಗಳಲ್ಲಿ ಹಲವು ಪಕ್ಷಗಳು ಸರ್ಕಾರ ನಡೆಸಿವೆ. ಆದರೆ ಈ ತನಕ ಬಡವರ, ದಲಿತರ ಸಂಕಷ್ಟಗಳನ್ನು ಪರಿಹರಿಸುವ ಕೆಲಸವನ್ನು ಮಾತ್ರ ಯಾವ ಸರ್ಕಾರವೂ ಮಾಡಿಲ್ಲ. ದಲಿತರ ಅಭಿವೃದ್ಧಿಗಾಗಿ ಸರ್ಕಾರಗಳು ಹಲವು ಕೋಟಿ ಅನುದಾನವನ್ನು ಬಿಡುಗಡೆ ಮಾಡುತ್ತಿವೆ. ಆದರೆ ದಲಿತ ವರ್ಗದ ಪ್ರಗತಿ ಮಾತ್ರ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಶಿಕ್ಷಣ ತಜ್ಞರಲ್ಲದ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕವನ್ನು ರದ್ದುಗೊಳಿಸಬೇಕು. ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕವನ್ನು ಶಾಲೆಗಳಿಗೆ ಒದಗಿಸಬೇಕು ಎಂದು ಆಗ್ರಹಿಸಿದರು.

ಪರಿಶಿಷ್ಟ ಸಮುದಾಯಕ್ಕೆ ಕಾಯ್ದಿಸಿರುವ ಹಣದ ದುರುಪಯೋಗ ತಡೆಗಟ್ಟಬೇಕು. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ರಕ್ಷಣಾತ್ಮಕ ಅಧಿಕಾರ ನೀಡಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡ, ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ತಡೆದಿರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಮಂಜೂರು ಮಾಡಬೇಕು. ವಿದ್ಯಾರ್ಥಿ ನಿಲಯಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೀಡಿರುವ ವರದಿ ಅನ್ವಯ ಪರಿಶಿಷ್ಟ ಜಾತಿ, ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ನ್ಯಾಯಮೂರ್ತಿ ಸುಭಾಷ್ ಆಡಿ ಅವರ ಶಿಫಾರಸು ಅಂತಿಮ ಗೊಂಡಿದ್ದು, ಸರ್ಕಾರ ಕೂಡಲೇ ಇದನ್ನು ಸ್ವೀಕಾರ ಮಾಡಬೇಕು. ರಾಜ್ಯದಾದ್ಯಂತ ಗುತ್ತಿಗೆ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.