ಮಾಗಡಿ: ಹೇಮಾವತಿ ಯೋಜನೆ ತಾಲ್ಲೂಕಿಗೆ ಬರಬೇಕು ಎಂಬ ಹಿನ್ನೆಲೆಯಲ್ಲಿ ಜೂ.15ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಶಿವಕುಮಾರಸ್ವಾಮಿ ಆಡಿಟೋರಿಯಂನಲ್ಲಿ ಸರ್ವ ಪಕ್ಷಗಳ ಸಭೆ ಕರೆಯಲು ತೀರ್ಮಾನಿಸಲಾಯಿತು.
ಪಟ್ಟಣದ ಸೋಮೇಶ್ವರ ದೇವಸ್ಥಾನ ಆವರಣದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೈತ ಸಂಘ ಕರೆದಿದ್ದ ಹೇಮಾವತಿ ನೀರಿಗಾಗಿ ಹೋರಾಟದ ರೂಪರೇಷ ಪೂರ್ವಭಾವಿ ಸಭೆಯಲ್ಲಿ ಮುಖಂಡರು ತೀರ್ಮಾನ ಕೈಗೊಂಡರು.
ಎಲ್ಲ ಪಕ್ಷದ ನಾಯಕರು, ಕನ್ನಡಪರ ಸಂಘಟನೆಗಳು, ರೈತ ಸಂಘ ಒಗ್ಗಟ್ಟಾಗಿ ಹೋರಾಟ ಮಾಡಿದಾಗ ಮಾತ್ರ ನಮ್ಮ ಪಾಲಿನ ಹೇಮಾವತಿ ನೀರು ಪಡೆಯಲು ಸಾಧ್ಯ. ತುಮಕೂರಿನಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ವಿರುದ್ಧ ಹೋರಾಟ ಮಾಡಲಾಗುತ್ತಿದ್ದು ಇದಕ್ಕೆ ಪ್ರತ್ಯುತ್ತರ ಕೊಟ್ಟಾಗ ಮಾತ್ರ ನಮ್ಮ ಪಾಲಿನ ನೀರು ಪಡೆಯಲು ಸಾಧ್ಯ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಶ್ರೀರಂಗ ಏತ ನೀರಾವರಿ ಮೂಲಕ ತಾಲ್ಲೂಕಿನ 63 ಕೆರೆಗಳನ್ನು ತುಂಬಿಸುವ ಯೋಜನೆ ಕೂಡ ಪೂರ್ಣವಾಗಬೇಕು. ಈ ಹಿನ್ನೆಲೆಯಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಸರ್ಕಾರಕ್ಕೆ ಮತ್ತು ತುಮಕೂರಿನ ಹೇಮಾವತಿ ವಿರೋಧಿ ನಾಯಕರಿಗೆ ಎಚ್ಚರಿಕೆ ಕೊಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಶಾಸಕ ಬಾಲಕೃಷ್ಣ, ಸಂಸದ ಡಾ.ಸಿ.ಎನ್.ಮಂಜುನಾಥ್, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಜಿ ಶಾಸಕ ಎ.ಮಂಜುನಾಥ್, ಬಿಜೆಪಿ ಹಿರಿಯ ಮುಖಂಡರಾದ ಎ.ಎಚ್.ಬಸವರಾಜು, ಪ್ರಸಾದ್ ಗೌಡ, ಸಮಾಜಸೇವಕ ಕೆ.ಬಾಗೇಗೌಡ, ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಸೇರಿದಂತೆ ತಾಲ್ಲೂಕಿನ ಎಲ್ಲ ಸಂಘಟನೆಗಳಿಗೆ ಆಹ್ವಾನ ನೀಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.