ADVERTISEMENT

ರಾಮನಗರ: ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2024, 6:22 IST
Last Updated 18 ಮಾರ್ಚ್ 2024, 6:22 IST
ರಾಮನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಸಂಪತ್ ಕುಮಾರ್ ಮಾತನಾಡಿದರು
ರಾಮನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಸಂಪತ್ ಕುಮಾರ್ ಮಾತನಾಡಿದರು   

ರಾಮನಗರ: ‘ರಾಜಧಾನಿ ಬೆಂಗಳೂರು ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕಾದರೆ ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟೆ ನಿರ್ಮಾಣ ಮಾಡಬೇಕು. ಈ ವಿಷಯದಲ್ಲಿ ರಾಜ್ಯ ಸರ್ಕಾರ ಇಚ್ಛಾಶಕ್ತಿ ತೋರಬೇಕು’ ಎಂದು ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಸಂಪತ್ ಕುಮಾರ್ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇಕೆದಾಟು ಅಣೆಕಟ್ಟೆ ನಿರ್ಮಾಣದ ವಿಷಯದಲ್ಲಿ ಸರ್ಕಾರಗಳು ಕೇವಲ ಭರವಸೆ ನೀಡುತ್ತಿವೆಯೇ ಹೊರತು, ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿಲ್ಲ. ಈ ಬಗ್ಗೆ ಸರ್ಕಾರ ಗಟ್ಟಿ ನಿಲುವಿನೊಂದಿಗೆ ಹೆಜ್ಜೆ ಇಡಬೇಕು’ ಎಂದರು.

‘ಚುನಾವಣೆಗೂ ಅಣೆಕಟ್ಟೆಗಾಗಿ ಮುಂಚೆ ಡಿ.ಕೆ. ಶಿವಕುಮಾರ್ ಅವರು ಸಂಗಮದಿಂದ ಬೆಂಗಳೂರಿನವರೆಗೆ ಮೇಕೆದಾಟು ಪಾದಯಾತ್ರೆ ನಡೆಸಿದ್ದರು. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ಸಹ ಭಾಗವಹಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವಕ್ಕೆ ಬಂದಿದೆ. ಆದರೆ, ಅಣೆಕಟ್ಟೆ ನಿರ್ಮಾಣಕ್ಕೆ ಮುಂದಾಗಿಲ್ಲ. ಈ ಕುರಿತು ಪ್ರಶ್ನಿಸಿದರೆ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ಸರ್ಕಾರ ಅಣೆಕಟ್ಟೆ ನಿರ್ಮಾಣ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬಾರದು. ಈ ಕುರಿತು ಇರುವ ಅಡೆತಡೆಗಳನ್ನು ಆದಷ್ಟು ಬೇಗ ನಿವಾರಿಸಿ ಚಾಲನೆ ನೀಡಬೇಕು. ಇಲ್ಲದಿದ್ದರೆ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಸಮಿತಿಯ ಕಾರ್ಯದರ್ಶಿ ಜಗದೀಶ್ವರ್ ರಾವ್ ಮುಖಂಡರಾದ ರಾಜು, ಶಿವಕುಮಾರ್, ಶ್ರೀನಿವಾಸ್, ದೇವರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.