ADVERTISEMENT

ಸ್ವಾಭಿಮಾನದ ಹೋರಾಟಕ್ಕೆ ರೈತರು ಕೈಜೋಡಿಸಿ: ಅನಸೂಯಮ್ಮ ಮನವಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 5:46 IST
Last Updated 3 ಜುಲೈ 2025, 5:46 IST
ಅನಸೂಯಮ್ಮ
ಅನಸೂಯಮ್ಮ   

ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ರೈತರು ಸರ್ಕಾರದ ಭೂಕಬಳಿಕೆ ನೀತಿ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಸ್ವಾಭಿಮಾನ ಹೋರಾಟಕ್ಕೆ ರೈತ ಸಮುದಾಯದವರು ಕೈಜೋಡಿಸಬೇಕೆಂದು ರೈತ ಹೋರಾಟಗಾರ್ತಿ ತಾಲ್ಲೂಕಿನ ಅರಳಾಳುಸಂದ್ರದ ಅನಸೂಯಮ್ಮ ಮನವಿ ಮಾಡಿದ್ದಾರೆ.

ಚನ್ನರಾಯಪಟ್ಟಣ ಹೋಬಳಿಯ ಸುಮಾರು 13 ಹಳ್ಳಿಗಳಿಗೆ ಸೇರಿದ ಫಲವತ್ತಾದ ಕೃಷಿಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಕೆಐಎಡಿಬಿ ಮೂಲಕ ಸ್ವಾಧೀನಪಡಿಸಿಕೊಳ್ಳುವ ಮೂಲಕ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ತಲೆಮಾರುಗಳಿಂದ ರೈತರು ಇಲ್ಲಿ ಕೃಷಿ ಮಾಡಿಕೊಂಡು ಜೀವನ ರೂಪಿಸಿಕೊಂಡಿದ್ದರು. ಅಂತಹ ರೈತರ ಜಮೀನು ವಶಪಡಿಸಿಕೊಂಡು ಒಕ್ಕಲೆಬ್ಬಿಸುವ ಕೆಲಸವನ್ನು ಸರ್ಕಾರಗಳು ಮಾಡುತ್ತಿದ್ದು, ಇದರ ವಿರುದ್ಧ ಹೋರಾಟ ಮಾಡುತ್ತಿರುವ ರೈತರಿಗೆ ಬೆಂಬಲ ನೀಡುವುದು ಅವಶ್ಯಕವಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 13 ಹಳ್ಳಿಗಳಿಗೆ ಸೇರಿದ ಫಲವತ್ತಾದ ಕೃಷಿಭೂಮಿಯನ್ನು ವಶಪಡಿಸಿಕೊಂಡಾಗ ರೈತರು ಪ್ರತಿಭಟನೆ ನಡೆಸುತ್ತಿದ್ದ ಜಾಗಕ್ಕೆ ಭೇಟಿ ನೀಡಿದ್ದ ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಂದು ಹೋರಾಟಕ್ಕೆ ಬೆಂಬಲ ನೀಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಭೂಸ್ವಾಧೀನವನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದಿದ್ದರೂ ಭೂಸ್ವಾಧೀನ ಕೈಬಿಡುವ ಬಗ್ಗೆ ಮಾತನಾಡದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

2022 ರಿಂದಲೂ ಅವಿರತವಾಗಿ ನಡೆಯುತ್ತಿರುವ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ರೈತರ ಹೋರಾಟಕ್ಕೆ ಸಾಹಿತಿಗಳು, ಸಿನಿಮಾ ಕಲಾವಿದರು, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಹಲವಾರು ಬುದ್ದಿಜೀವಿಗಳು ಕೈಜೋಡಿಸಿದ್ದಾರೆ. ಅದೇ ರೀತಿ ರೈತರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಕ್ಕೆ ಬೆಂಬಲ ನೀಡಿ ಅನ್ಯಾಯಕ್ಕೆ ಒಳಗಾಗಿರುವ ರೈತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.