ಡಿ.ಜೆ.
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಾದ್ಯಂತ ಆ. 27ರಿಂದ ಗಣೇಶೋತ್ಸವ ಆಚರಣೆ ಮುಗಿಯುವವರೆಗೆ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನಾ ಕಾರ್ಯಕ್ರಮಗಳಲ್ಲಿ ಡಿ.ಜೆ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೋಮವಾರ ಆದೇಶ ಹೊರಡಿಸಿದ್ದಾರೆ.
ಗಣೇಶೋತ್ಸವವು ಶಾಂತಿಯುತವಾಗಿ ನಡೆಯಲು, ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ತಡೆಯಲು, ಸಾರ್ವಜನಿಕರು, ವಯಸ್ಕರ, ಮಕ್ಕಳ ಆರೋಗ್ಯ ಹಾಗೂ ನೆಮ್ಮದಿಗೆ ಭಂಗ ಉಂಟಾಗಬಾರದು ಎಂಬ ಕಾರಣಕ್ಕೆ ಪೊಲೀಸ್ ಕಾಯ್ದೆ-1963 ಕಲಂ 35, 36ರ ಅನ್ವಯ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಗಸೂಚಿ ಪಾಲಿಸಲು ಸೂಚನೆ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ (ಪಿಒಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗೌರಿ–ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ, ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಕುರಿತು ಜಿಲ್ಲಾಡಳಿತ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಗಣೇಶ ಸಮಿತಿಗಳು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳಿಗೆ ಒಳಪಟ್ಟು ಅನುಮತಿ ಪಡೆದ ನಂತರವೇ ಸ್ಥಾಪಿಸಬೇಕು. ಅನುಮತಿ ಪತ್ರಗಳಲ್ಲಿ ಲೈಸೆನ್ಸ್ ನೀಡುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸಲಾಗಿದೆ ಹಾಗೂ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಗೆ ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.