ADVERTISEMENT

ಕನಕಪುರ: ತುಟ್ಟಿಭತ್ಯೆ ಮಂಜೂರು ನೌಕರರ ಹರ್ಷ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 3:50 IST
Last Updated 25 ಜುಲೈ 2021, 3:50 IST

ಕನಕಪುರ: ಸರ್ಕಾರದ ಉನ್ನತ ಹಂತದ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ತುಟ್ಟಿಭತ್ಯೆಯನ್ನು ರಾಜ್ಯ ಸರ್ಕಾರಿ ನೌಕರರಿಗೂ ಸಿಗುವಂತೆ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಅವರಿಗೆ ತಾಲ್ಲೂಕಿನ ಸರ್ಕಾರಿ ನೌಕರರ ಪರವಾಗಿ ಧನ್ಯವಾದ ಸಲ್ಲಿಸಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಚಿಕ್ಕೆಂಪೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಕಾರಣದಿಂದ ಕಳೆದ ಜುಲೈ 1ರಿಂದ ತಡೆಹಿಡಿಯಲಾಗಿದ್ದ 3 ಕಂತುಗಳ ತುಟ್ಟಿಭತ್ಯೆಯನ್ನು ಮಂಜೂರು ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಂಘದಿಂದ ಮನವಿ ಸಲ್ಲಿಸಲಾಗಿತ್ತು. ಅಖಿಲ ಭಾರತ ಬೆಲೆ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

ಕೇಂದ್ರದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತುಟ್ಟಿಭತ್ಯೆ ನೀಡಲು ಒಪ್ಪಿಗೆ ನೀಡಿ ಆದೇಶ ನೀಡಿದ್ದಾರೆ. ಈಪ್ರಸ್ತಾವನೆಯು ಆರ್ಥಿಕ ಇಲಾಖೆ ಮೂಲಕ ಎರಡು, ಮೂರು ದಿನಗಳಲ್ಲಿ ಸರ್ಕಾರಿ ಆದೇಶವಾಗಲಿದ್ದು, ಎಲ್ಲಾ ನೌಕರರಿಗೆ ವೇತನದಲ್ಲಿ ಸೇರ್ಪಡೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.