ADVERTISEMENT

62 ಕೋವಿಡ್ ಆರೈಕೆ ಕೇಂದ್ರ ಆರಂಭ

ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 8 ಮೇ 2021, 3:31 IST
Last Updated 8 ಮೇ 2021, 3:31 IST
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದರು
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದರು   

ರಾಮನಗರ: ಮುಂದಿನ ಒಂದು ವಾರದೊಳಗೆ ರಾಮನಗರ ಜಿಲ್ಲಾ ಕೇಂದ್ರದಲ್ಲಿ 240 ಆಮ್ಲಜನಕ ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯ ಒಟ್ಟು 62 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೋವಿಡ್ ಆರೈಕೆ ಕೇಂದ್ರ ತೆರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಶುಕ್ರವಾರ ಸಂಸದ ಡಿ.ಕೆ.ಸುರೇಶ್ ಹಾಗೂ ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆ ವರ್ಚುಯಲ್ ಸಭೆ ನಡೆಸಿದ ಅವರು ‘ರಾಮನಗರದ ಹೊಸ ಜಿಲ್ಲಾಸ್ಪತ್ರೆಯಲ್ಲಿ 120 ಹಾಗೂ ಕಂದಾಯ ಭವನದಲ್ಲಿ 120 ಆಮ್ಲಜನಕ ಸಹಿತ ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.

ಸದ್ಯಕ್ಕೆ ಜಿಲ್ಲೆಯ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಹಾಸಿಗೆಗಳ ಸಮಸ್ಯೆ ಇಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಇಷ್ಟು ಹೊಸ ಹಾಸಿಗೆಗಳನ್ನು ಹಾಕಲಾಗುತ್ತಿದೆ. ಅದೇ ರೀತಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಶಾಲೆ-ಹಾಸ್ಟೆಲ್‌ಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗುತ್ತದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 2,800 ಸೋಂಕಿತರು ಮನೆಗಳಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರೆಲ್ಲರನ್ನೂ ಈ ಆರೈಕೆ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ADVERTISEMENT

ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಘಟಕ: ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 1 ಸಾವಿರ ಕೆಎಲ್ ಆಮ್ಲಜನಕ ಪೂರೈಕೆ ಮಾಡುವ ಘಟಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೆರವಿನಿಂದ ಸ್ಥಾಪನೆ ಮಾಡಲಾಗುತ್ತಿದೆ. ಪ್ರಾಧಿಕಾರವು 1.08 ಕೋಟಿ ನೆರವು ನೀಡುತ್ತಿದೆ. ಜತೆಗೆ, ಕನಕಪುರ, ಮಾಗಡಿ, ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಗಳಲ್ಲಿ 500 ಎಲ್‌ಎಂಪಿ ಆಮ್ಲಜನಕ ಪೂರೈಕೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಇವೆಲ್ಲ ಅತಿ ತ್ವರಿತವಾಗಿ ಕಾರ್ಯಗತವಾಗುತ್ತವೆ ಎಂದುಅಶ್ವತ್ಥನಾರಾಯಣ ಹೇಳಿದರು.

ಗಂಭೀರ ಸೋಂಕಿತರ ಪರೀಕ್ಷೆಗೆ ಸಿಟಿ ಸ್ಯ್ಯಾನ್‌ ಮಾಡಲು ಖಾಸಗಿ ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಜತೆಗೆ, ಜಿಲ್ಲಾಸ್ಪತ್ರೆಯಲ್ಲಿ ಟೊಯೊಟಾ ಕಿರ್ಲೋಸ್ಕರ್ ಕಂಪನಿ ನೆರವಿನಿಂದ ಸಿಟಿ ಸ್ಕ್ಯಾನ್‌ ಯಂತ್ರವನ್ನು ಸ್ಥಾಪಿಸಲಾಗುವುದು ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾಧಿಕಾರಿ ರಾಕೇಶ್‌ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಡಿಎಚ್ ಒ ಡಾ.ನಿರಂಜನ ಮುಂತಾದ ಹಿರಿಯ ಅಧಿಕಾರಿಗಳು ಇದ್ದರು.

ನೇಮಕ: ಉಪ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯೂ ಆದ ಹಿರಿಯ ಕೆಎಎಸ್ ಅಧಿಕಾರಿ ಸತೀಶ ಕುಮಾರ್ ಅವರನ್ನು ರಾಮನಗರ ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿಯನ್ನಾಗಿ ಸರ್ಕಾರ ನೇಮಿಸಿದ್ದು, ಅವರು ಕೂಡ ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.