ADVERTISEMENT

ಡಿ.ಕೆ. ಸುರೇಶ್ ಪತ್ನಿ ಎಂದು ಹೇಳಿ ವಿಡಿಯೊ ಮಾಡಿದ್ದ ಸರ್ಕಾರಿ ಶಾಲೆ ಶಿಕ್ಷಕಿ ಬಂಧನ

ಕನಕಪುರದ ದೊಡ್ಡಆಲಹಳ್ಳಿ ಮೂಲದ ಮಹಿಳೆ; ಮೈಸೂರಿನ ಸರ್ಕಾರಿ ಶಾಲೆಯಲ್ಲಿ ಕೆಲಸ

​ಪ್ರಜಾವಾಣಿ ವಾರ್ತೆ
Published 1 ಮೇ 2025, 13:46 IST
Last Updated 1 ಮೇ 2025, 13:46 IST
<div class="paragraphs"><p>ವಿಡಿಯೊ ಮಾಡಿದ್ದ ಸರ್ಕಾರಿ ಶಾಲೆ ಶಿಕ್ಷಕಿ</p></div>

ವಿಡಿಯೊ ಮಾಡಿದ್ದ ಸರ್ಕಾರಿ ಶಾಲೆ ಶಿಕ್ಷಕಿ

   

ರಾಮನಗರ: ತಾನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು, ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ಹರಿಬಿಟ್ಟಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ರಾಮನಗರ ಸಿಇಎನ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಮೈಸೂರು ತಾಲ್ಲೂಕಿನ ಇಲವಾಲದ ಪವಿತ್ರ ಬಂಧಿತ ಶಿಕ್ಷಕಿ. ಸಮೀಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಪವಿತ್ರ ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ ಮೂಲದವರು. ಪತಿಯಿಂದ ವಿಚ್ಛೇದನ ಪಡೆದಿರುವ ಆಕೆ ಪ್ರತ್ಯೇಕವಾಗಿ ವಾಸವಾಗಿದ್ದರು. ಮಾನಸಿಕವಾಗಿಯೂ ಕುಗ್ಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ನೆರೆಹೊರೆಯವರನ್ನು ಹೆದರಿಸಲು ಪವಿತ್ರ ತಾನು ಡಿ.ಕೆ. ಸುರೇಶ್ ಪತ್ನಿ ಎಂದು ಹೇಳಿಕೊಂಡಿದ್ದಳು. ತನ್ನ ಚಿತ್ರಗಳನ್ನು ಎಡಿಟ್ ಮಾಡಿ ಸುರೇಶ್ ಚಿತ್ರದೊಂದಿಗೆ ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ವಿಡಿಯೊ ಕೂಡ ಹರಿಬಿಟ್ಟಿದ್ದಳು. ಪವಿತ್ರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಮೈಸೂರಿಗೆ ತೆರಳಿ ಬಂಧಿಸಲಾಯಿತು. ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು ಎಂದು ಮೂಲಗಳು ಹೇಳಿವೆ.

ಇನ್‌ಸ್ಟಾಗ್ರಾಮ್‌ನಲ್ಲಿ pavitrah256 ಎಂಬ ಹೆಸರಿನಲ್ಲಿ ಹಾಗೂ ಫೇಸ್‌ಬುಕ್‌ನಲ್ಲಿ PavitraDksuresh Dodalahalli ಎಂಬ ಹೆಸರಿನಲ್ಲಿ ಖಾತೆ ಹೊಂದಿದ್ದ ಪವಿತ್ರ, ಎರಡೂ ಜಾಲತಾಣಗಳಲ್ಲಿ ಏ. 8ರಂದು ವಿಡಿಯೊ ಪೋಸ್ಟ್ ಮಾಡಿದ್ದರು.

‘ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್ ಅವರ ಅಭಿಮಾನಿ. ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ ಯಾರೂ ಮಾಡದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಅವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ’ ಎಂದು ವಿಡಿಯೊದಲ್ಲಿ ಹೇಳಿಕೊಂಡಿದ್ದಳು.

ವಿಡಿಯೊ ವಿಷಯ ಗಮನಕ್ಕೆ ಬರುತ್ತಿದ್ದಂತೆ ವಕೀಲ ಪ್ರದೀಪ್ ಎಂಬವರು ಸುರೇಶ್ ಪರವಾಗಿ ಸಿಇಎನ್ ಠಾಣೆಗೆ ದೂರು ಕೊಟ್ಟಿದ್ದರು. ದುರುದ್ದೇಶದಿಂದ ತಾನು ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಅಪಪ್ರಚಾರ ನಡೆಸುತ್ತಿರುವ ಮಹಿಳೆ, ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿದ್ದಾರೆ. ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.