ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ ೂ ಸ್ವಾಧೀನ ವಿರೋಧಿಸಿ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ನಗರದಲ್ಲಿ ಜಿಲ್ಲಾಡಳಿತದ ವಿರುದ್ಧ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಕಂದಾಯ ಭವನದ ಆವರಣದಲ್ಲಿ ಜಮಾಯಿಸಿದ ಮಹಿಳೆಯರು, ರೈತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು, ನಂತರ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಬಳಿಯ ಪ್ರತಿಭಟನಾ ಸ್ಥಳದವರೆಗೆ ಪಾದಯಾತ್ರೆಯಲ್ಲಿ ಬಂದರು. ಮಾರ್ಗದುದ್ದಕ್ಕೂ ಸರ್ಕಾರ ಮತ್ತು ಜಿಲ್ಲಾಧಿಕಾರಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪಾದಯಾತ್ರೆಯುದ್ದಕ್ಕೂ ಸರ್ಕಾರದ ವಿರುದ್ಧ ಹಾಗೂ ಉಪನಗರಕ್ಕೆ ಭೂ ಸ್ವಾಧೀನ ವಿರುದ್ಧದ ಪ್ರತಿಭಟನಾ ಫಲಕಗಳು ಗಮನ ಸೆಳೆದವು. ತಮಟೆ ಮತ್ತು ಡೊಳ್ಳು ಸದ್ದು ಮೊಳಗಿತು. ನಿಗದಿಪಡಿಸಿರುವ ಸ್ಥಳದಲ್ಲೇ ಪ್ರತಿಭಟನೆ ನಡೆಸುವಂತೆ ಪೊಲೀಸರು ಮನವೊಲಿಸಲು ಯತ್ನಿಸಿದರು.
ಅದಕ್ಕೆ ಒಪ್ಪದ ರೈತರು ಡಿ.ಸಿ ಕಚೇರಿ ಪ್ರವೇಶದ್ವಾರದ ಎದುರೇ ಪ್ರತಿಭಟನೆ ನಡೆಸುವುದಾಗಿ ಪಟ್ಟು ಹಿಡಿದು, ಕಚೇರಿಯತ್ತ ಬಂದರು. ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದಂತೆ ನಿಷೇಧಾಜ್ಞೆ ಇರುವ ಕಾರಣ, ಬಿಸಿಲು ಲೆಕ್ಕಿಸದೆ ಪ್ರವೇಶದ್ವಾರದ ಎದುರಿನ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಇದರಿಂದಾಗಿ ಬೆಂಗಳೂರು- ಮೈಸೂರು ಹಳೆ ಹೆದ್ದಾರಿ ರಸ್ತೆಯ ಒಂದು ಭಾಗದಲ್ಲಿ ಪೊಲೀಸರು ವಾಹನಗಳ ಸಂಚಾರ ಬಂದ್ ಮಾಡಿ, ಮತ್ತೊಂದು ಭಾಗದಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ಮಲ್ಲಯ್ಯ, ಜಯ ಕರ್ನಾಟಕ ಜನಪರ ವೇದಿಕೆಯ ಕುಮಾರಸ್ವಾಮಿ, ಭೈರಮಂಗಲ- ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಭೂ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇನೆ ಮುಖಂಡರು ಮಾತನಾಡಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸ್ಥಳದಲ್ಲೇ ಹತ್ತಕ್ಕೂ ಹೆಚ್ಚು ಪೊಲೀಸ್ ವಾಹನಗಳು, ಐವತ್ತಕ್ಕೂ ಹೆಚ್ಚು ಪೊಲೀಸರು ಬೀಡು ಬಿಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.