ಕನಕಪುರ: ಸರ್ಕಾರ ರಾಗಿ ಖರೀದಿ ನೋಂದಣಿಗೆ ಅವಕಾಶ ಕಲ್ಪಿಸಿದ್ದರೂ ತಾಲ್ಲೂಕಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ನೋಂದಣಿ ಆಗುತ್ತಿಲ್ಲ. ಬೇರೆ ಜಿಲ್ಲೆಗೆ ಹೋಲಿಸಿದರೆ ರಾಮನಗರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ನೋಂದಣಿಯಾಗಿದೆ ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ಚೀಲೂರು ಮುನಿರಾಜು
ಆರೋಪಿಸಿದರು.
ತಾಲ್ಲೂಕು ರೈತ ಸಂಘದಿಂದ ರಾಗಿ ಖರೀದಿ ನೋಂದಣಿ ಸಮಸ್ಯೆ ಪರಿಹಾರ, ರಸಗೊಬ್ಬರ, ಕೀಟನಾಶಕ, ಬಿತ್ತನೆಬೀಜ ಸಮರ್ಪಕವಾಗಿ ವಿತರಣೆ ಮಾಡುವಂತೆ ಒತ್ತಾಯಿಸಿ ಶನಿವಾರ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ರೈತರು ಬೆಳೆದಿರುವ ರಾಗಿ ಖರೀದಿ ಮಾಡಲು ಮೂರನೇ ಹಂತದಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಿದೆ. ಹಾಸನ ಜಿಲ್ಲೆಯಲ್ಲಿ 14,700, ಮಂಡ್ಯ– 9,200, ತುಮಕೂರಿನಲ್ಲಿ 12,711 ರೈತರ ನೋಂದಣಿಯಾಗಿದೆ. ರಾಮನಗರದಲ್ಲಿ 4,764 ರೈತರು ಮಾತ್ರ ನೋಂದಣಿ ಆಗಿದ್ದು ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ದೂರಿದರು.
ರಾಜ್ಯದಲ್ಲಿ ಏಕಕಾಲಕ್ಕೆ ನೋಂದಣಿ ಪ್ರಕ್ರಿಯೆ ಆರಂಭವಾದರೂ ರಾಮನಗರದಲ್ಲಿ ಮಾತ್ರ ಕಡಿಮೆಯಾಗಿದೆ. ಇದಕ್ಕೆ ಕಾರಣವೇನೆಂದು ರಾಗಿ ಖರೀದಿ ಕೇಂದ್ರದ ಅಧಿಕಾರಿಗಳು ತಿಳಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಗಮನಹರಿಸಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಆಗುವಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಜಿಲ್ಲೆಯ ರೈತರಿಗೆ ಅನ್ಯಾಯವಾಗಲಿದೆ ಎಂದರು.
ಇತ್ತೀಚೆಗೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆಯೂ ಚುರುಕುಗೊಂಡಿದೆ. ರೈತರಿಗೆ ಅಗತ್ಯ ರಸಗೊಬ್ಬರ, ಬಿತ್ತನೆಬೀಜ, ಕೀಟನಾಶಕ ದೊರೆಯುತ್ತಿಲ್ಲವೆಂಬ ದೂರು ಕೇಳಿ ಬರುತ್ತಿದೆ. ಕೃಷಿ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ತಾಲ್ಲೂಕಿನಲ್ಲಿ ಅಗತ್ಯ ಇರುವಷ್ಟು ರಸಗೊಬ್ಬರ, ಬಿತ್ತನೆಬೀಜ, ಕೀಟನಾಶಕವನ್ನು ದಾಸ್ತಾನು ಮಾಡಿಕೊಳ್ಳಬೇಕು. ಈ ಬಗ್ಗೆ ತಾಲ್ಲೂಕು ಆಡಳಿತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಗ್ರೇಡ್-2 ತಹಶೀಲ್ದಾರ್ ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ರೈತ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು
ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.