ರೈತರ ಪ್ರತಿಭಟನೆ
ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯಲ್ಲಿ ನಿರ್ಮಿಸಲು ಮುಂದಾಗಿರುವ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಗೆ ಸ್ವಾಧೀನಪಡಿಸಿಕೊಳ್ಳಲಿರುವ ಜಮೀನಿಗೆ ಪರಿಹಾರ ದರ ನಿರ್ಧರಿಸುವ ಕುರಿತು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆಯುತ್ತಿರುವ ಸಭೆಯಲ್ಲಿ ಭಾಗವಹಿಸಲು ಎಲ್ಲಾ ರೈತರಿಗೂ ಅವಕಾಶ ನೀಡಬೇಕು ಎಂದು ಆಗ್ರಹಿಸಿ, ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಡಿಎ) ವತಿಯಿಂದ ಜಾರಿಯಾಗುತ್ತಿರುವ ಯೋಜನಾ ವ್ಯಾಪ್ತಿಯ ಜಮೀನು ಮಾಲೀಕರ ಜೊತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಸಭೆ ಹಮ್ಮಿಕೊಂಡಿದ್ದಾರೆ.
ಸಭೆಯಲ್ಲಿ ಭಾಗವಹಿಸಲು ಯೋಜನಾ ವ್ಯಾಪ್ತಿಯ ರೈತರ ಜೊತೆಗೆ, ಯೋಜನೆ ವಿರೋಧಿಸುತ್ತಿರುವ ರೈತರು ಸಹ ಡಿ.ಸಿ ಕಚೇರಿ ಎದುರು ಜಮಾಯಿಸಿದರು. ಆಗ ಪೊಲೀಸರು, ಹಂತ ಹಂತವಾಗಿ ಸಭೆ ನಡೆಯಲಿದರ. ಹಾಗಾಗಿ ನಿಗದಿತ ಜಮೀನು ಮಾಲೀಕರನ್ನು ಮಾತ್ರ ಸಭೆಗೆ ಬಿಡಲಾಗುತ್ತದೆ ಎಂದರು.
ಅದಕ್ಕೆ ವಿರೋಧ ವ್ಯಕ್ತಪಡಿಸಿದ ರೈತರು, ಎಲ್ಲರಿಗೂ ಬಿಡಬೇಕು ಎಂದು ಪಟ್ಟು ಹಿಡಿದರು. ಆಗ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ಮಾತಿಗೆ ಒಪ್ಪದ ರೈತರು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು. ಸರ್ಕಾರ, ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿದರು. ನಮ್ಮ ಭೂಮಿ ನಮ್ಮ ಹಕ್ಕು ಎಂಬ ಘೋಷಣೆಗಳು ಮೊಳಗಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.