ADVERTISEMENT

ಸದೃಢ ಆರೋಗ್ಯಕ್ಕೆ ಮುನ್ನೆಚ್ಚರಿಕೆ ಅಗತ್ಯ

ಕೋಡಂಬಹಳ್ಳಿ: ತಾಲ್ಲೂಕು ಆರೋಗ್ಯ ಮೇಳ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2022, 7:16 IST
Last Updated 24 ಏಪ್ರಿಲ್ 2022, 7:16 IST
ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿಯಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಆರೋಗ್ಯ ಮೇಳವನ್ನು ಸಂಸದ ಡಿ.ಕೆ. ಸುರೇಶ್ ಉದ್ಘಾಟಿಸಿದರು. ಡಾ.ಪದ್ಮಾ, ಅವಿನಾಶ್ ಮೆನನ್ ರಾಜೇಂದ್ರನ್, ಇಕ್ರಂ, ಸಂತೋಷ್ ಬಾಬು ಇದ್ದರು
ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿಯಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಆರೋಗ್ಯ ಮೇಳವನ್ನು ಸಂಸದ ಡಿ.ಕೆ. ಸುರೇಶ್ ಉದ್ಘಾಟಿಸಿದರು. ಡಾ.ಪದ್ಮಾ, ಅವಿನಾಶ್ ಮೆನನ್ ರಾಜೇಂದ್ರನ್, ಇಕ್ರಂ, ಸಂತೋಷ್ ಬಾಬು ಇದ್ದರು   

ಚನ್ನಪಟ್ಟಣ: ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮವಹಿಸಿದಾಗ ಮಾತ್ರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಸಂಸದ ಡಿ.ಕೆ. ಸುರೇಶ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕೋಡಂಬಹಳ್ಳಿಯ ಸರ್ಕಾರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಕಚೇರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯಿಂದ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಜೀವನಕ್ಕಾಗಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿರುವುದು ಅವಶ್ಯಕವಾಗಿದೆ. ಆರೋಗ್ಯ ಇಲಾಖೆಯಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಜನರಿಗೆ ತಿಳಿಸುವ ಮತ್ತು ರೋಗಗಳ ಕುರಿತು ಜಾಗೃತಿ ಮೂಡಿಸಲು ತಾಲ್ಲೂಕು ಕೇಂದ್ರಗಳಲ್ಲಿ ಮೇಳ ಆಯೋಜಿಸಲಾಗಿದೆ. ಹಾಗೆಯೇ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸಿಕೊಡಲಾಗುತ್ತದೆ ಎಂದು
ಹೇಳಿದರು.

ADVERTISEMENT

ಸರ್ಕಾರ ಆರೋಗ್ಯಕ್ಕೆ ಸಂಬಂಧಿಸಿದಂತೆ ಆಯುಷ್ಮಾನ್ ಕಾರ್ಡ್ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಎಲ್ಲಾ ವಯೋಮಾನದ ಸಾರ್ವಜನಿಕರು ಆರೋಗ್ಯಕರ ಜೀವನಕ್ಕಾಗಿ ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಡಾ.ಪದ್ಮಾ ಮಾತನಾಡಿ, ಕೇಂದ್ರ ಸರ್ಕಾರವು ಮಹತ್ವಕಾಂಕ್ಷಿ ಯೋಜನೆಯಾದ ಮೇಳವನ್ನು ಗ್ರಾಮೀಣರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಜಾರಿಗೆ ತಂದಿದೆ. ಈ ಯೋಜನೆಯು ಎಲ್ಲಾ ಜನರಿಗೆ ವೈದ್ಯಕೀಯ ಇಲಾಖೆಗಳಿಂದ ಸಿಗುವ ಸೌಲಭ್ಯ ಮತ್ತು ಸೇವೆಗಳ ಅರಿವು ಮೂಡಿಸುವ ಸದುದ್ದೇಶವನ್ನು ಹೊಂದಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್, ಜಿ.ಪಂ. ಸಿಇಒ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್, ತಹಶೀಲ್ದಾರ್ ನಾಗೇಶ್, ತಾ.ಪಂ. ಇ.ಒ ಚಂದ್ರು, ಕೋಡಂಬಹಳ್ಳಿ ಗ್ರಾ.ಪಂ. ಅಧ್ಯಕ್ಷ ರಾಜಣ್ಣ, ಉಪಾಧ್ಯಕ್ಷೆ ಜ್ಯೋತಿ, ಆರೋಗ್ಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಕೋಡಂಬಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಸೂಕ್ತ ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸೆ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.