ರಾಮನಗರ: ‘ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಿಗೊಳಿಸಲು ಜಿಲ್ಲೆಯ ಪ್ರತಿ ಮನೆ ಮನೆಯಲ್ಲಿಯೂ ಆ. 15ರವರೆಗೆ ರಾಷ್ಟ್ರಧ್ವಜವನ್ನು ಹಾರಿಸಬೇಕು. ಹರ್ ಘರ್ ತಿರಂಗಾ ಅಭಿಯಾನದಡಿ ಇದನ್ನು ಅನುಷ್ಠಾನಗೊಳಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಭಿಯಾನ ಅನುಷ್ಠಾನಗೊಳಿಸಬೇಕಿದೆ. ಅಭಿಯಾನದಡಿ ತೆಗೆಯಲಾದ ಸೆಲ್ಪಿ ಭಾವಚಿತ್ರ ಹಾಗೂ ವಿಡಿಯೋಗಳನ್ನು harghartiranga.com ಜಾಲತಾಣದಲ್ಲಿ ಅಪ್ಲೋಡ್ ಮಾಡಬೇಕು’ ಎಂದರು.
‘ಪ್ರತಿ ಮನೆ, ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ನಿಗಮ ಮಂಡಳಿಗಳು, ಸ್ವಸಹಾಯ ಗುಂಪುಗಳು, ಸಾರ್ವಜನಿಕ ಉದ್ಯಮ ಸಂಸ್ಥೆಗಳು, ಸಂಘ– ಸಂಸ್ಥೆಗಳು, ನಾಗರಿಕ ಸೇವಾ ಸಂಸ್ಥೆಗಳು, ಶಾಲಾ-ಕಾಲೇಜುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೆಲ್ಲರೂ ಸ್ವಯಂ ಪ್ರೇರಿತರಾಗಿ ಆ.15ರವರೆಗೆ ರಾಷ್ಟ್ರಧ್ವಜ ಹಾರಿಸಬೇಕು’ ಎಂದು ಹೇಳಿದರು.
‘ಜಿಲ್ಲೆಯ ಶಾಲಾ ಹಾಗೂ ಕಾಲೇಜು ಮಟ್ಟದಲ್ಲಿ ಆಯೋಜಿಸುವ ತಿರಂಗಾ ಸಂಗೀತೋತ್ಸವದಲ್ಲಿ ದೇಶಭಕ್ತಿ ಕುರಿತಾದ ಹಾಗೂ ಬಾವುಟದ ಘನತೆ ಹೆಚ್ಚಿಸುವ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿರಂಗಾ ಜನಯಾತ್ರೆ ಹಾಗೂ ತಿರಂಗಾ ಬಟ್ಟೆಗಳನ್ನು ಧರಿಸಿ ಮಾನವ ಸರಪಳಿ ನಿರ್ಮಿಸಬೇಕು’ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
‘ಜಿಲ್ಲಾ ಖಾದಿ ಗ್ರಾಮೋದ್ಯೋಗ ಇಲಾಖೆ ಅಧಿಕಾರಿಗಳು ತಿರಂಗಾ ಯೋಜನೆಯಡಿ ಆಹಾರ, ಹಾರ ಹಾಗೂ ದೀಪ ಇತ್ಯಾದಿ ಕರಕುಶಲ ವಸ್ತುಗಳ ಉತ್ಪನ್ನಗಳ ಮಾರಾಟ ಮತ್ತು ತಿರಂಗಾ ವಸ್ತು ಪ್ರದರ್ಶನ ಹಮ್ಮಿಕೊಳ್ಳಬೇಕು. ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬೈಕ್, ಸೈಕಲ್ ಜನಯಾತ್ರೆಗಳನ್ನು ಆಯೋಜಿಸಬೇಕು’ ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.