ರಾಮನಗರ: ಕರ್ನಾಟಕ ಜಾನಪದ ಪರಿಷತ್‌ನ ನೂತನ ಅಧ್ಯಕ್ಷರಾಗಿ ಜಾನಪದ ವಿದ್ವಾಂಸ ಪ್ರೊ. ಹಿ.ಶಿ. ರಾಮಚಂದ್ರೇಗೌಡ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷ ಟಿ. ತಿಮ್ಮೇಗೌಡರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ, ಬುಧವಾರ ನಡೆದ ಪರಿಷತ್ತಿನ 122ನೇ ಆಡಳಿತ ಮಂಡಳಿ ಸಭೆಯಲ್ಲಿ ರಾಮಚಂದ್ರೇಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ತಿಳಿಸಿದ್ದಾರೆ. ಇದೇ 22ರಂದು ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು ನಡೆಯಲಿದೆ.
ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಜಾನಪದ ಪ್ರಾಧ್ಯಾಪಕರಾಗಿರುವ ರಾಮಚಂದ್ರೇಗೌಡರು 2001ರಿಂದ 2004ರವರೆಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಸಮಗ್ರ ಜನಪದ ಸಾಹಿತ್ಯ ಪ್ರಕಟಣ ಸಮಿತಿ ಅಧ್ಯಕ್ಷರಾಗಿಯೂ ದುಡಿದಿದ್ದಾರೆ. 25ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಇವರಿಗೆ ಸಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.