ರಾಮನಗರ: ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿನ ರಾಜಕೀಯ ಅಸ್ಥಿರತೆಯನ್ನು ಸರಿಪಡಿಸಿಕೊಂಡು ಆದಷ್ಟು ಶೀಘ್ರವಾಗಿ ಸಂಪುಟ ವಿಸ್ತರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದರು.
ನಗರದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆದಾಗಲೂ ಹಲವು ತಿಂಗಳ ಕಾಲ ಅವರೊಬ್ಬರೇ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಬೇಕಾದ ಪರಿಸ್ಥಿತಿ ಬಂತು. ಬಿಜೆಪಿಯಲ್ಲಿನ ಈಗಿನ ಬೆಳವಣಿಗೆಗಳನ್ನು ನೋಡಿದರೆ ಸದ್ಯಕ್ಕೆ ಸಂಪುಟ ವಿಸ್ತರಣೆ ಆಗುವುದು ಅನುಮಾನ. ಇನ್ನಷ್ಟು ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಆಡಳಿತ ನಡೆಸಬೇಕಾಗಬಹುದು. ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಉಲ್ಬಣ ಆಗುವ ಸಾಧ್ಯತೆ ಇದೆ. ಹೀಗಾಗಿ ಸಮರೋಪಾದಿಯಲ್ಲಿ ಕೆಲಸ ಮಾಡಲು ಸಂಪುಟ ರಚನೆ ಅನಿವಾರ್ಯವಾಗಿದೆ’ ಎಂದರು.
ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿ ‘ಅವರು ರಬ್ಬರ್ ಸ್ಟ್ಯಾಂಪೋ ಇಲ್ಲ ಐರನ್ ಸ್ಟ್ಯಾಂಪೋ ಎಂಬುದು ನನಗೆ ಗೊತ್ತಿಲ್ಲ. ಕೆಲವರು ಆತುರದಲ್ಲಿ ಹೇಳಿಕೆ ಕೊಡುತ್ತಿದ್ದಾರೆ. ಅವರಿಗೆ ಇನ್ನಷ್ಟು ಕಾಲಾವಕಾಶ ನೀಡಬೇಕು ಎಂಬುದು ನನ್ನ ಅಭಿಪ್ರಾಯ. ಈ ಬಗ್ಗೆ ಮುಂದಿನ ದಿನಗಳಲ್ಲಿ ಜನರೇ ಈ ಬಗ್ಗೆ ತೀರ್ಮಾನ ನೀಡಲಿದ್ದಾರೆ. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಆದ ಲೋಪದೋಷಗಳನ್ನು ಸರಿಪಡಿಸಿಕೊಂಡು ಉತ್ತಮ ಆಡಳಿತ ನೀಡುತ್ತಾರೆಯೇ ಎಂಬುದನ್ನು ಕಾದು ನೋಡೋಣ’ ಎಂದರು.
ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಎಚ್‌ಡಿಕೆ ‘ಹೋಗಿದ್ದಾರೆ. ಅವರ ಭವಿಷ್ಯಕ್ಕೆ ಒಳ್ಳೆಯದಾಗಲಿ’ ಎಂದಷ್ಟೇ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.