ರಾಮನಗರ: ‘ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ಮುಳುಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಕೈಗೊಂಡಿರುವ ಹೋರಾಟಕ್ಕೆ ಪಕ್ಷದ ಕಾರ್ಯಕರ್ತರು ಶಕ್ತಿ ತುಂಬಬೇಕು. ಹೋರಾಟವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಮೈತ್ರಿಕೂಟವು ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಹೋರಾಟದ ರೂಪುರೇಷೆ ಕುರಿತು ಚರ್ಚಿಸುವುದಕ್ಕಾಗಿ ನಗರದಲ್ಲಿ ಶನಿವಾರ ಪಕ್ಷದ ಮುಖಂಡರೊಂದಿಗೆ ಸಭೆಯಲ್ಲಿ ಅವರು ಮಾತನಾಡಿದರು.
ಹಿಂದಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ, ಜನರಿಗೆ ಗ್ಯಾರಂಟಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷವು ಹಗರಣಗಳಲ್ಲಿ ಸಿಲುಕಿದೆ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್‌ನವರು ಅದಕ್ಕಿಂತ ದುಪ್ಪಟ್ಟು ಕಮಿಷನ್ ಪಡೆಯುತ್ತಾ ರಾಜ್ಯವನ್ನು ಅಧೋಗತಿಗೆ ಕೊಂಡೊಯ್ದಿದ್ದಾರೆ. ಅವರ ವಿರುದ್ಧ ಹೋರಾಟ ರೂಪಿಸಿ ಜನರನ್ನು ಜಾಗೃತಿಗೊಳಿಸಬೇಕಿದೆ ಎಂದರು.
ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ಹಲವು ಹಗರಣಗಳಲ್ಲಿ ಮುಳುಗಿದೆ. ಮುಡಾ ಹಗರಣ, ವಾಲ್ಮಿಕಿ ನಿಗಮದ ಹಣ ದುರುಪಯೋಗ, ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಹಣ ಬಳಕೆ, ಹಾಲಿನ ಪ್ರೋತ್ಸಾಹಧನ ಬಾಕಿ ಸೇರಿದಂತೆ ಹಲವು ಅಕ್ರಮಗಳಲ್ಲಿ ತೊಡಗಿಸಿಕೊಂಡಿದೆ. ಸರ್ಕಾರದ ವಿರುದ್ಧದ ಹೋರಾಟಕ್ಕೆ ಎರಡೂ ಪಕ್ಷಗಳ ಕಾರ್ಯಕರ್ತರು ಸನ್ನದ್ಧರಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಪಕ್ಷದ ಕಾರ್ಯಕರ್ತರನ್ನು ಅಣಿಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎ. ಮಂಜುನಾಥ್, ಚನ್ನಪಟ್ಟಣ ಜೆಡಿಎಸ್ ಅಧ್ಯಕ್ಷ ಎಚ್.ಸಿ. ಜಯಮುತ್ತು, ಮುಖಂಡರಾದ ಕೆ.ಎಸ್. ಶಂಕರಯ್ಯ, ನರಸಿಂಹಮೂರ್ತಿ, ಎಂ.ಆರ್. ಶಿವಕುಮಾರ್ ಸ್ವಾಮಿ, ಮಂಜುನಾಥ್, ಉಮೇಶ್, ಶೋಭಾ, ಸರಸ್ವತಿ, ಗೂಳಿಗೌಡ ಹಾಗೂ ಇತರರು ಇದ್ದರು.
‘ಬೀದಿಗಿಳಿದು ಹೋರಾಡಬೇಕಾದ ಅನಿವಾರ್ಯತೆ’
‘ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಸರ್ಕಾರದ ಹಗರಣಗಳ ಕುರಿತು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಮೈತ್ರಿಕೂಟದ ಸದಸ್ಯರು ಪಟ್ಟು ಹಿಡಿದರೂ ಸರ್ಕಾರ ಅವಕಾಶ ನೀಡಿಲ್ಲ. ಇದರಿಂದಾಗಿ ನಾವು ಬೀದಿಗಿಳಿದು ಜನರೊಂದಿಗೆ ಹೋರಾಡಬೇಕಾಗಿದೆ. ಇದಕ್ಕಾಗಿ ಪಕ್ಷದ ಕಾರ್ಯಕರ್ತರೊಂದಿಗೆ ಜಿಲ್ಲಾವಾರು ಸಭೆ ನಡೆಸಿ ಹೋರಾಟಕ್ಕೆ ಅಣಿಗೊಳಿಸಲಾಗುತ್ತಿದೆ. ಈಗಾಗಲೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತಿದ್ದು ಉಳಿದ ಕಡೆಯೂ ನಡೆಯಲಿದೆ. ಬೆಂಗಳೂರಿನಿಂದ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ಈ ಭಾಗದಲ್ಲಿ ಯಶಸ್ವಿಗೊಳಿಸಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.