ರಾಮನಗರ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಬಾರಿಯ 70ನೇ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಬೆಳಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಲಿದ್ದಾರೆ. ಅದಕ್ಕೂ ಮೊದಲು ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಬೆಳಗ್ಗೆ 8ಕ್ಕೆ ದ್ವಜಾರೋಹಣ ನೆರವೇರಿಸಿ 9ಕ್ಕೆ ವೇದಿಕೆ ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಿಲ್ಲಾ ಕ್ರೀಡಾಂಗಣಕ್ಕೆ ಬರಬೇಕು ಎಂದರು.
ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿತರಣೆ, ಬ್ಯಾನರ್, ಪುಷ್ಪಾಲಂಕಾರ, ಕ್ರೀಡಾಂಗಣದ ಸಮತಟ್ಟು ಹಾಗೂ ಸ್ವಚ್ಛತೆ ಕಾಪಾಡುವುದು. ಕುಡಿಯುವ ನೀರು ಪೂರೈಕೆ, ನಿರಂತರ ವಿದ್ಯುತ್ ಪೂರೈಕೆ ಹಾಗೂ ವಿದ್ಯುತ್ ಅಲಂಕಾರ, ರಾಷ್ಟ್ರಗೀತೆ ಹಾಗೂ ನಾಡಗೀತೆ ಹಾಡಲು ಕಲಾವಿದರ ನಿಯೋಜನೆ, ಆರೋಗ್ಯ ಇಲಾಖೆ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಹಾಗೂ ಪೊಲೀಸರಿಂದ ಸೂಕ್ತ ಬಂದೋಬಸ್ಥ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದು ಸೂಚನೆ ನೀಡಿದರು.
ಹಾಗೆಯೇ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಗುವುದು. ಅಂದು ರಾಯರದೊಡ್ಡಿಯಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಭೆಯಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಡಿವೈಎಸ್‌ಪಿ ಶ್ರೀನಿವಾಸ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.