
ರಾಮನಗರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು 55 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆ. 18ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ. 28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮಾರಂಭ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ರಮೇಶ್ ಹೇಳಿದರು.
ರಾಜ್ಯದ 1.45 ಲಕ್ಷ ಶಿಕ್ಷಕರನ್ನು ಪ್ರತಿನಿಧಿಸುವ ಸಂಘವನ್ನು ಸ್ಥಾಪಿಸಿದ್ದು ನಮ್ಮ ಜಿಲ್ಲೆಯವರೇ ಆದ ಜೈಶಂಕರ್ ಎಂಬುದು ಹೆಮ್ಮೆಯ ವಿಷಯ. ಸಂಘವು ನಮ್ಮ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಗರದ ಗುರುಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೇರಿದಂತೆ ವಿವಿಧ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇಲಾಖೆಯ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪ್ರತಿ ಜಿಲ್ಲೆಯ ಒಬ್ಬ ಸಾಧಕ ಶಿಕ್ಷಕನಿಗೆ ಮಹಾತ್ಮ ಜ್ಯೋತಿಬಾ ಫುಲೆ ಪ್ರಶಸ್ತಿ ಹಾಗೂ ಒಬ್ಬ ಸಾಧಕಿ ಶಿಕ್ಷಕಿಗೆ ಮಾತೆ ಸಾವಿತ್ರಿಬಾ ಫುಲೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಗಣ್ಯರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಅನ್ಯ ಕಾರ್ಯನಿಮಿತ್ತ ರಜೆ ಸೌಲಭ್ಯವಿದೆ. ಹಾಗಾಗಿ, ಜಿಲ್ಲೆಯ ಎಲ್ಲಾ ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಶಿಕ್ಷಕರ ಖಾಲಿ ಹುದ್ದೆ ಭರ್ತಿ, ಇತ್ತೀಚಿನ ವರ್ಷಗಳಲ್ಲಿ ರಚನೆಯಾಗಿರುವ ತಾಲ್ಲೂಕು ಕೇಂದ್ರಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆರಂಭಿಸುವುದು, ಪ್ರತಿಭಾ ಕಾರಂಜಿಗೆ ಹೆಚ್ಚಿನ ಅನುದಾನ ಬಿಡುಗಡೆ, ಬಡ್ತಿ ಗೊಂದಲ ನಿವಾರಣೆ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವುದು ಸೇರಿದಂತೆ ಸುಮಾರು 27 ಹಕ್ಕೋತ್ತಾಯಗಳನ್ನು ಇದೇ ಸಂದರ್ಭದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಾಸುದೇವ್, ರಾಮನಗರ ತಾಲ್ಲೂಕು ಅಧ್ಯಕ್ಷೆ ರುದ್ರಾಣಮ್ಮ, ಚನ್ನಪಟ್ಟಣ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಹದೇವ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.