ADVERTISEMENT

ರಾಮನಗರ | ಕುಷ್ಠರೋಗ ಮುಕ್ತ ಜಿಲ್ಲೆಗೆ ಪಣ: ಎಡಿಸಿ ಚಂದ್ರಯ್ಯ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 2:25 IST
Last Updated 16 ಅಕ್ಟೋಬರ್ 2025, 2:25 IST
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ನಡೆದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಮಾತನಾಡಿದರು. ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಇದ್ದಾರೆ 
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ನಡೆದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಮಾತನಾಡಿದರು. ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಇದ್ದಾರೆ    

ರಾಮನಗರ: ‘ಪ್ರಾಥಮಿಕ ಹಂತದಲ್ಲೇ ಕುಷ್ಠರೋಗ ಪ್ರಕರಣಗಳನ್ನು ಪತ್ತೆ ಹಚ್ಚಿ, ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸುವ ಮೂಲಕ ಬೆಂಗಳೂರು ದಕ್ಷಿಣ ಜಿಲ್ಲೆಯನ್ನು 2027ರೊಳಗೆ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ನಡೆದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ನ. 3ರಿಂದ 19ರವರೆಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಕಳೆದ 5 ವರ್ಷಗಳಲ್ಲಿ ಜಿಲ್ಲೆಯಲ್ಲಿ 74 ಕುಷ್ಠರೋಗ ಪ್ರಕರಣಗಳು ಕಂಡುಬಂದಿವೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, 60 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಪ್ರಸ್ತುತ 14 ಸಕ್ರಿಯ ಕುಷ್ಠರೋಗ ಪ್ರಕರಣಗಳಿದ್ದು, ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳು ಇರುವ ಹಳ್ಳಿಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ರೋಗಿಗಳನ್ನು ಪರೀಕ್ಷಿಸುತ್ತಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ರೋಗಿಗಳಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ರೋಗಿಯು ನಿಯಮಿತವಾಗಿ ಚಿಕಿತ್ಸೆ ಪಡೆದಲ್ಲಿ (ಎಂಡಿಟಿ) ಸಂಪೂರ್ಣವಾಗಿ ಕುಷ್ಠರೋಗವನ್ನು ಗುಣಪಡಿಸಬಹುದು. ಕುಷ್ಠರೋಗವು ಮೈಕೋಬ್ಯಾಕ್ಟಿರಿಯಂ ಲೆಪ್ರ ಎಂಬ ರೋಗಾಣುವಿನಿಂದ ಉಂಟಗುವ ಸಾಂಕ್ರಾಮಿಕ ರೋಗವಾಗಿದೆ’ ಎಂದು ಹೇಳಿದರು.

‘ರೋಗವು ಮುಖ್ಯವಾಗಿ ನರಗಳು ಹಾಗೂ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಚರ್ಮದ ಮೇಲ್ಭಾಗದಲ್ಲಿ ಮಚ್ಚೆಗಳು, ಗಂಟುಗಳು, ಹುಣ್ಣುಗಳು ಕಂಡಬಂದಲ್ಲಿ ಸಮೀಪದ ಸರ್ಕಾರ ಆರೋಗ್ಯ ಸಂಸ್ಥೆಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬಹುದು. ಕುಷ್ಠರೋಗ ಪ್ರಕರಣ ಪತ್ತೆಯಾದಲ್ಲಿ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ದೊರೆಯಲಿದೆ’ ಎಂದರು.

ಸಭೆಯಲ್ಲಿ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.