ADVERTISEMENT

ಲೋಕಸಭೆ ಚುನಾವಣೆ: ಮೈತ್ರಿ ಪಕ್ಷಗಳ ಕಾರ್ಯಕರ್ತರನ್ನು ಬೆಸೆಯಲು ಒತ್ತು – ಯೋಗೇಶ್ವರ್

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 13:23 IST
Last Updated 7 ಜನವರಿ 2024, 13:23 IST
ಸಿ.ಪಿ. ಯೋಗೇಶ್ವರ್
ಸಿ.ಪಿ. ಯೋಗೇಶ್ವರ್   

ಬಿಡದಿ: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಹಾಗೂ ಮುಖಂಡರನ್ನು ಬೆಸೆಯಲು ಒತ್ತು ನೀಡುವ ಕುರಿತು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು.

ಎಚ್‌ಡಿಕೆ ಭೇಟಿ ಕುರಿತು ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಕ್ಷೇತ್ರದಲ್ಲಿ ಮೈತ್ರಿ ಪಕ್ಷದವರು ಸಂಸದರಾಗುವ ಜೊತೆಗೆ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಮಾಡುವ ಕುರಿತು ಸಹ ಚರ್ಚೆ ಮಾಡಿದೆವು’ ಎಂದರು.

‘ಸಂಕ್ರಾಂತಿ ಹಬ್ಬದ ಬಳಿಕ, ಎರಡೂ ಪಕ್ಷಗಳ ನಾಯಕರು ಕ್ಷೇತ್ರಗಳ ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ. ಆಗ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಯಾವ ಪಕ್ಷದ ಪಾಲಾಗಲಿದೆ ಎಂಬುದರ ಮೇಲೆ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ತೀರ್ಮಾನವಾಗಲಿದೆ. ಅದಕ್ಕೂ ಮುಂಚೆ ನಾನೇ ಅಭ್ಯರ್ಥಿ ಎಂದು ಜನ ಹೇಳುತ್ತಿದ್ದಾರೆ. ರಾಜಕೀಯದಲ್ಲಿ ಇದೆಲ್ಲಾ ಇದ್ದಿದ್ದೆ. ಅಂತಿಮವಾಗಿ ಪಕ್ಷ ನಿರ್ಧಾರ ಕೈಗೊಳ್ಳಲಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.