ADVERTISEMENT

ರಾಮನಗರ: ಇಬ್ಬರು ಪಿಡಿಒ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 4:59 IST
Last Updated 27 ಮಾರ್ಚ್ 2024, 4:59 IST
   

ರಾಮನಗರ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ತಾಲ್ಲೂಕಿನ ಬಿಡದಿ ಹೋಬಳಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಯತೀಶ್ ಚಂದ್ರ ಹಾಗೂ ಚನ್ನಪಟ್ಟಣ ಮೈಲನಾಯಕನಹಳ್ಳಿ ಪಿಡಿಒ ಶಿಬಾ ನಿಖಾತ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಚನ್ನಪಟ್ಟಣ ಮತ್ತು ಮೈಸೂರಿನಲ್ಲಿ ಮನೆ ಹೊಂದಿರುವ ಯತೀಶ್ ₹ 20 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ. ಸದ್ಯ ಪತ್ನಿ ಹೆಸರಿನಲ್ಲಿ ಮೈಸೂರಿನಲ್ಲಿ ಮನೆ ನಿರ್ಮಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈಗಲ್ಟನ್ ರೆಸಾರ್ಟ್‌ನಲ್ಲಿ ಬಾಡಿಗೆ ಮನೆಯಲ್ಲಿದ್ದ ಯತೀಶ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಾಳಿಗೊಳಗಾಗಿರುವ ಯತೀಶ್ ಮತ್ತು ಶಿಬಾ ಇಬ್ಬರೂ ಒಂದೇ ಬ್ಯಾಚ್‌ನ ಪಿಡಿಒಗಳಾಗಿದ್ದಾರೆ. ಶಿಬಾ ಅವರೂ ಅಕ್ರಮವಾಗಿ ಆಸ್ತಿ ಸಂಪಾದಿಸಿರುವ ಆರೋಪವಿದ್ದು, ಒಂದು ತಿಂಗಳಿಂದ ಕರ್ತವ್ಯಕ್ಕೆ ಗೈರಾಗಿದ್ದರು ಎಂಬ ಆರೋಪ ಕೇಳಿಬಂದಿದೆ.

ADVERTISEMENT

ಮಂಚನಾಯಕನಹಳ್ಳಿ ರಾಜ್ಯದಲ್ಲೇ ಅತಿ ಹೆಚ್ಚು ತೆರಿಗೆ ವಸೂಲಿಯಾಗುವ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎರಡು ವರ್ಷದಿಂದ ಇಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಹಾಗಾಗಿ, ಅಲ್ಲಿ ಪಿಡಿಒ ಆಗಿರುವ ಯತೀಶ್ ಅವರ ಮನೆ ಹಾಗೂ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.