ADVERTISEMENT

ರಾಮನಗರ | ಅನ್ನಪೂರ್ಣಮ್ಮ ವರದಿ ಜಾರಿಗೊಳಿಸಿ: ನಂಜಪ್ಪ ಆಗ್ರಹ

ಮಡಿವಾಳ ಜನಜಾಗೃತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 7:16 IST
Last Updated 29 ಜುಲೈ 2025, 7:16 IST
<div class="paragraphs"><p>ರಾಮನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಡಿಡಿವಾಳ ಸಂಘದಿಂದ ನಡೆದ ಜನಜಾಗೃತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ ಮಕ್ಕಳನ್ನು ಗಣ್ಯರು ಸನ್ಮಾನಿಸಿದರು. </p></div>

ರಾಮನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಡಿಡಿವಾಳ ಸಂಘದಿಂದ ನಡೆದ ಜನಜಾಗೃತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ ಮಕ್ಕಳನ್ನು ಗಣ್ಯರು ಸನ್ಮಾನಿಸಿದರು.

   

ರಾಮನಗರ: ‘ಮಡಿವಾಳ ಸಮುದಾಯದ ಸ್ಥಿತಿಗತಿ ಕುರಿತು ಪ್ರೊ. ಅನ್ನಪೂರ್ಣಮ್ಮ ಆಯೋಗ ಅಧ್ಯಯನ ನಡೆಸಿ ನೀಡಿರುವ ವರದಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದರೆ ಸಮುದಾಯದ ಅಭಿವೃದ್ಧಿಗೆ ಅನುಕೂಲವಾಗಲಿದೆ’ ಎಂದು ಕರ್ನಾಟಕ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ಸಿ. ನಂಜಪ್ಪ ಆಗ್ರಹಿಸಿದರು.

ಮಡಿವಾಳ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಘಟಕವು ನಗರದ ಡಾ.ಬಿ. ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜನಜಾಗೃತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಆಯೋಗ ತನ್ನ ವರದಿಯಲ್ಲಿ ಶಿಫಾರಸು ಮಾಡಿದೆ’ ಎಂದರು.

ADVERTISEMENT

‘ವರದಿಯ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಈ ಪ್ರಕ್ರಿಯೆಯಲ್ಲಿ ಸರ್ಕಾರ ವಿಳಂಬ ಮಾಡುತ್ತಿದ್ದು, ಕಾಣದ ಕೈಗಳು ಇದರ ಹಿಂದೆ ಕೆಲಸ ಮಾಡುತ್ತಿವೆ. ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಅನೇಕ ಅಡೆತಡೆಗಳು ಎದುರಾಗುತ್ತಲೇ ಇವೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ನಿರ್ಲಕ್ಷ್ಯಕ್ಕೆ ಒಳಗಾಗಿರುವ ಮಡಿವಾಳ ಸಮುದಾಯಕ್ಕೆ ರಾಜಕೀಯ ಸ್ಥಾನಮಾನವೂ ಇಲ್ಲವಾಗಿದೆ. ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ನಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು. ಆ ‍ವರ್ಗದ ಮೀಸಲಾತಿಗಾಗಿ ಹೋರಾಡುತ್ತಾ ಬಂದಿದ್ದೇವೆ. ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ ಆಯೋಗದ ವರದಿ ಅನುಷ್ಠಾನವಾಗಿದ್ದರೂ ಪರವಾಗಿಲ್ಲ, ಅನ್ನಪೂರ್ಣಮ್ಮ ವರದಿಯನ್ನಾದರೂ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಮಂಟೇದಯ್ಯ ಮಾತನಾಡಿ, ‘ಜಿಲ್ಲೆಯಲ್ಲಿ ಮಡಿವಾಳ ಸಮುದಾಯಕ್ಕೆ ದೋಬಿ ಘಾಟ್ ಮತ್ತು ಸಮುದಾಯ ಭವನ‌ ನಿರ್ಮಾಣಕ್ಕೆ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಅವರಿಗೆ ಮನವಿ ಮಾಡಲಾಗಿದೆ. ಅವರು ಸಹಕಾರ ನೀಡುವ ಭರವಸೆ ನೀಡಿದ್ದಾರೆ. ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಅವರು ಸಮುದಾಯದ 55ಕ್ಕೂ ಹೆಚ್ಚು ವೃತ್ತಿ ನಿರತರಿಗೆ ನಗರಸಭೆಯಿಂದ ಸವಲತ್ತುಗಳನ್ನು ವಿತರಿಸಿದ್ದಾರೆ’ ಎಂದು ಕೃತಜ್ಞತೆ ಸಲ್ಲಿಸಿದರು.

ಹಾಸನ ವಿಭಾಗದ ಅಧ್ಯಕ್ಷೆ ಪದ್ಮಾ ರವಿ, ‘ಸಮುದಾಯದ ಅಭಿವೃದ್ಧಿಯಲ್ಲಿ ಶಿಕ್ಷಣ ಮತ್ತು ಸಂಘಟನೆ ಪ್ರಮುಖ ಪಾತ್ರ ವಹಿಸುತ್ತದೆ. ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಯುವಜನರು ಉನ್ನತ ವಿದ್ಯಾಭ್ಯಾಸ ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ನಮ್ಮ ಸಮುದಾಯಕ್ಕೆ ಧ್ವನಿಯಾಗಬೇಕು’ ಎಂದು ಸಲಹೆ ನೀಡಿದರು.

ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ರೈಡ್ ನಾಗರಾಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್, ಸಂಘದ‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಮುಖಂಡರಾದ ನಾರಾಯಣ್, ಮಾಗಡಿಯ ಶ್ರೀನಿವಾಸ್, ಪುಟ್ಟಸ್ವಾಮಿ, ಸಿದ್ದಗಂಗಯ್ಯ, ಪಾಂಡವಪುರದ ರವಿಕುಮಾರ್, ಶಿಕ್ಷಕ ಚಿಕ್ಕವೀರಯ್ಯ ಹಾಗೂ ಇತರರು ಇದ್ದರು.

ರಾಜ್ಯದಲ್ಲಿ ನಮ್ಮ ಸಮುದಾಯದ ಒಬ್ಬ ಶಾಸಕರೂ ಇಲ್ಲ. ಆದರೆ ನಾವು ಬೆಂಬಲಿಸಿದವರು ಮಾತ್ರ ಶಾಸಕರಾಗಿ ಆಯ್ಕೆಯಾಗುತ್ತಾರೆ. ಸಮುದಾಯದವರು ಸಲ್ಲಿಸುವ ಬೇಡಿಕೆಗಳಿಗೆ ಸ್ಪಂದಿಸುವವರೇ ಇಲ್ಲವಾಗಿದೆ
– ನಂಜಪ್ಪ ರಾಜ್ಯಾಧ್ಯಕ್ಷ ರಾಜ್ಯ ಮಡಿವಾಳ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.