
ಮಾಗಡಿ: ಇನ್ನೊಂದು ವರ್ಷ ಕಾಲಾವಕಾಶ ನೀಡಿದರೆ ಪಟ್ಟಣದ ಸಂಪೂರ್ಣ ಅಭಿವೃದ್ಧಿಪಡಿಸುವುದಾಗಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಪಟ್ಟಣದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ₹4ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಗೌರಮ್ಮನಕೆರೆ ಕಾಮಗಾರಿಗೂ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಫೆಬ್ರವರಿ ತಿಂಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ಅಲ್ಪಸಂಖ್ಯಾತರ ವಾರ್ಡ್‌ಗಳಿಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಅನುದಾನ ಒದಗಿಸಿದ್ದಾರೆ ಎಂದರು.
ಪಟ್ಟಣದ ಹೊಂಬಾಳಮ್ಮನ ಕೆರೆ ಮುಂಭಾಗದ ಕೋಟೆ ಕಂದಕ ಜಾಗದಲ್ಲಿ ಕೆ-ಶಿಫ್ ವತಿಯಿಂದ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ. ಕಂದಕವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಸ್ ದರ ಏರಿಕೆ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಬಾಲಕೃಷ್ಣ ತಿರುಗೇಟು ನೀಡಿದರು. ಕೇಂದ್ರ ಸರ್ಕಾರ ಈಗಾಗಲೇ ಜನಸಾಮಾನ್ಯರಿಗೆ ಹೆಚ್ಚುವರಿ ತೆರಿಗೆ ಹಾಕಿ ಸಾಕಷ್ಟು ತೊಂದರೆ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ ಪರಿಣಾಮ ಸಾರಿಗೆ ಇಲಾಖೆ ಬೆಲೆ ಏರಿಸಿದೆ ಎಂದು ಸಮರ್ಥಿಸಿಕೊಂಡರು.
ಪುರಸಭೆ ಅಧ್ಯಕ್ಷೆ ರಮ್ಯಾ ನರಸಿಂಹಮೂರ್ತಿ, ಉಪಾಧ್ಯಕ್ಷ ರಿಯಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ಕೆ.ವಿ.ಬಾಲು, ರಹಮತ್, ಶಬೀರ್, ಮಮತಾ ಗುರುಸ್ವಾಮಿ, ಹೇಮಲತಾ, ಭಾಗ್ಯಮ್ಮ, ಅನಿಲ್ ಕುಮಾರ್, ಕಾಂತರಾಜು ಪುರಸಭೆ ಮುಖ್ಯಾಧಿಕಾರಿ ಶಿವರುದ್ರಯ್ಯ, ಮುಖಂಡರಾದ ಅಬೀದ್, ಪರ್ವೀಸ್ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.