ADVERTISEMENT

ಕನಕಪುರ | ಹಗರಣಗಳ ನ್ಯಾಯಯುತ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ

ಹಗರಣಗಳ ನ್ಯಾಯಯುತ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಪತ್ರ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 14:28 IST
Last Updated 25 ಜುಲೈ 2024, 14:28 IST
ಕನಕಪುರ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀರಾಮ ಸೇನೆಯ ಪದಾಧಿಕಾರಿಗಳು ಶಿವಕುಮಾರ್ ಗೆ ಒತ್ತಾಯದ ಮನವಿ ಪತ್ರ ಸಲ್ಲಿಸಿದರು, ಪದಾಧಿಕಾರಿಗಳು ಉಪಸ್ಥಿತರಿದ್ದರು
ಕನಕಪುರ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀರಾಮ ಸೇನೆಯ ಪದಾಧಿಕಾರಿಗಳು ಶಿವಕುಮಾರ್ ಗೆ ಒತ್ತಾಯದ ಮನವಿ ಪತ್ರ ಸಲ್ಲಿಸಿದರು, ಪದಾಧಿಕಾರಿಗಳು ಉಪಸ್ಥಿತರಿದ್ದರು   

ಕನಕಪುರ: ರಾಜ್ಯದಲ್ಲಿ ನಡೆದಿರುವ ಹಗರಣಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುತ್ತಿಲ್ಲ. ತಮ್ಮ ಪಕ್ಷದ ತಪ್ಪಿತಸ್ಥರನ್ನು ರಕ್ಷಣೆ ಮಾಡಲು ಹೊರಟ್ಟಿದ್ದಾರೆ ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ದುರುಪಯೋಗ ಆಗಿರುವ ಹಣವನ್ನು ಮತ್ತೆ ಸರ್ಕಾರದ ಬೊಕ್ಕಸಕ್ಕೆ ಕಟ್ಟಿಸಬೇಕು ಎಂದು ಒತ್ತಾಯಿಸಿ ಗುರುವಾರ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ಸಿದ್ದರಾಮಯ್ಯ ಅವರು ಅಹಿಂದ ನಾಯಕ, ಶೋಷಿತರ ಪರವೆಂದು ಹೇಳಿಕೊಳ್ಳುತ್ತಾ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಅವರ ಸರ್ಕಾರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ನಿಗಮಗಳಲ್ಲಿ ನಡೆದಿರುವ ಅಕ್ರಮಗಳನ್ನು ಪಾರದರ್ಶಕವಾಗಿ ತನಿಖೆ ನಡೆಸಬೇಕು, ವಂಚಕರಿಂದ ಹಣವನ್ನು ನಿಗಮಕ್ಕೆ ವಾಪಸ್ ಕಟ್ಟಿಸಬೇಕು ಎಂದು ಅವರು ಒತ್ತಾಯಿಸಿದರು.

ADVERTISEMENT

ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲಾಗಿಸಿ ತನಿಖೆಯ ದಿಕ್ಕನ್ನೇ ಬದಲಿಸಲು ಹೊರಟಿದ್ದಾರೆ ಎಂದು ದೂರಿದರು.

ಇಂತಹ ಬೆಳವಣಿಗೆಯನ್ನು ಶ್ರೀರಾಮ ಸೇನೆಯು ತೀವ್ರವಾಗಿ ಖಂಡಿಸುತ್ತದೆ ಹಾಗೂ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮವನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕೆಂದು ಅಗ್ರಹಿಸಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ನವೀನ್, ಸಾಮಾಜಿಕ ಜಾಲತಾಣದ ಪವನ್ ಗೌಡ, ಸಹ ಕಾರ್ಯದರ್ಶಿ ಅರುಣ್, ತಾಲ್ಲೂಕು ಅಧ್ಯಕ್ಷ ರಾಜಗೋಪಾಲ್, ಪದಾಧಿಕಾರಿಗಳಾದ ಮೋಹನ್ ಹಾಗೂ ಚೀರಣಕುಪ್ಪೆ ಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.