
ರಾಮನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಣ್ಯರು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಕರಪತ್ರ ಬಿಡುಗಡೆ ಮಾಡಿದರು.
ರಾಮನಗರ: ‘ದೇಹದ ಆರೋಗ್ಯ ಎಷ್ಟು ಮುಖ್ಯವೋ, ಮಾನಸಿಕ ಆರೋಗ್ಯವೂ ಅಷ್ಟೇ ಮುಖ್ಯವಾಗಿದೆ. ಪ್ರತಿಯೊಬ್ಬರು ತಮ್ಮ ಮಾನಸಿಕ ಆರೋಗ್ಯ ಕಾಪಾಡುವತ್ತ ಗಮನ ಹರಿಸಬೇಕು’ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ವಿ. ರೇಣುಕ ಸಲಹೆ ನೀಡಿದರು.
ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ನಾವು ಕೆಲವೊಮ್ಮೆ ಸಣ್ಣ ವಿಷಯಗಳನ್ನು ನಿರ್ಲಕ್ಷಿಸುವುದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ನಮ್ಮ ಸುತ್ತಮುತ್ತ ಯಾರಾದರೂ ನಿರಂತರ ಒತ್ತಡ ಅಥವಾ ಆತಂಕ, ನಿದ್ರೆ ಕೊರತೆ, ಕೆಲಸದ ಅತಿಯಾದ ಒತ್ತಡ, ಕೌಟುಂಬಿಕ ಒತ್ತಡ, ಸಾಮಾಜಿಕ ಮಾಧ್ಯಮದಲ್ಲಿನ ನಕಾರಾತ್ಮಕತೆ ಮತ್ತು ಸ್ವಯಂ ಕಾಳಜಿ ಕೊರತೆಯಿಂದ ಬಳಸುತ್ತಿದ್ದರೆ, ಅಂತಹವರು ಮಾನಸಿಕ ಮಾನಸಿಕ ಒತ್ತಡಕ್ಕೆ ಒಳಗಾಗಿರುತ್ತಾರೆ’ ಎಂದರು.
‘ಅಂತಹ ವ್ಯಕ್ತಿಗಳ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಪ್ರತಿದಿನ 30 ನಿಮಿಷ ಧ್ಯಾನ ಅಥವಾ ಯೋಗ ಮಾಡಬೇಕು. ಕುಟುಂಬ ಮತ್ತು ಸ್ನೇಹತರೊಂದಿಗೆ ಮುಕ್ತವಾಗಿ ಮಾತನಾಡಬೇಕು. ಪ್ರತಿದಿನ ನಮಗೆ ಎಂದು ಸ್ವಲ್ಪ ಸಮಯವನ್ನು ಇಟ್ಟುಕೊಳ್ಳಬೇಕು. ಸರಿಯಾದ ಸಮಯಕ್ಕೆ ನಿದ್ರೆ ಮಾಡಬೇಕು. ಪೌಷ್ಟಿಕ ಆಹಾರ ಸೇವಿಸಬೇಕು’ ಎಂದು ಹೇಳಿದರು.
‘ಪುಸ್ತಕಗಳನ್ನು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ಮಿತವಾಗಿ ಬಳಸುವುದು ಮಾಡುವುದು ಹಾಗೂ ಮನೋವೈದ್ಯರು ಅಥವಾ ಸಲಹೆಗಾರರಿಂದ ಆಪ್ತ ಸಮಾಲೋಚನೆ/ಸಲಹೆ ಪಡೆದುಕೊಳ್ಳುವ ಮೂಲಕ ಮಾನಸಿಕ ಒತ್ತಡದಿಂದ ಮುಕ್ತರಾಗಬಹುದು.
ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಪಂಚಾಕ್ಷರಿ ಎಂ. ಮಾತನಾಡಿ, ‘ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಲವಾರು ಒತ್ತಡಗಳ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿಯೊಬ್ಬರು ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡರೆ ಉತ್ತಮವಾಗಿ ಕರ್ತವ್ಯ ನಿಭಾಯಿಸಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.
ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮನಗರ ಉಪ ವಿಭಾಗದ ಡಿವೈಎಸ್ಪಿ ಶ್ರೀನಿವಾಸ್ ಮಾತನಾಡಿದರು. ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯನ್ನೊಳಗೊಂಡ ಕರಪತ್ರವನ್ನು ಗಣ್ಯರು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತಾ ಪಿ.ಆರ್, ಜಿಲ್ಲಾ ಆಸ್ಪತ್ರೆಯ ಮನೋರೋಗ ತಜ್ಞ ಡಾ. ಶಿವಸ್ವಾಮಿ ಬಿ.ಎಂ, ಮಾನಸಿಕ ಆರೋಗ್ಯ ವಿಭಾಗದ ಮನೋರೋಗ ತಜ್ಞ ಡಾ. ಆದರ್ಶ್ ಎ.ಎಂ., ಜಿಲ್ಲಾ ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.