
ರಾಮನಗರ: ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಪೊಲೀಸರು ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ. ಅತಿರೇಕದ ಸಂಭ್ರಮಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಜಿಲ್ಲಾ ಪೊಲೀಸರು, ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.
ಈಗಾಗಲೇ ಅಧಿಕಾರಿಗಳು, ಬಾರ್, ಹೋಂಸ್ಟೆ, ರೆಸಾರ್ಟ್ ಮಾಲೀಕರ ಜೊತೆ ಸಭೆ ನಡೆಸಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಿರುವುದು ಸೇರಿದಂತೆ ವಿವಿಧ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ಜಾಗೃತಿ ಮೂಡಿಸುತ್ತಿದ್ದಾರೆ. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಮೇಲೆ ನಿಗಾ ಇಟ್ಟಿದ್ದಾರೆ.
ಪ್ರಮುಖ ಹೆದ್ದಾರಿಗಳಲ್ಲಿ ಬ್ಯಾರಿಕೇಡ್ ಹಾಕಿ, ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ಮೇಲೆ ಹಾಗೂ ಸಂಭ್ರಮಾಚರಣೆ ಹೆಸರಿನಲ್ಲಿ ಪುಂಡಾಟಿಕೆ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ. ವರ್ಷಾಚರಣೆ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.
ವರ್ಷಾಂತ್ಯದ ದಿನವಾದರೂ ಬಾರ್ ಅಂಡ್ ರೆಸ್ಟೋರೆಂಟ್‌ಗಳು ಎಂದಿನಂತೆ ತೆರೆದಿರಲಿವೆ. ಹೊಸ ವರ್ಷದ ಸಂಭ್ರಮಾಚರಣೆಯ ಕಾರ್ಯಕ್ರಮಗಳು ರಾತ್ರಿ 12.15ಕ್ಕೆ ಮುಗಿಯಸಬೇಕು. ಅಲ್ಲದೆ, ಕಾರ್ಯಕ್ರಮಗಳಿಗೆ ಆಯೋಜಕರು ಪೊಲೀಸರಿಂದ ಪೂರ್ವಾನುಮತಿ ಕಡ್ಡಾಯವಾಗಿದೆ.
ಪ್ರವೇಶಕ್ಕೆ ನಿರ್ಬಂಧ: ರಾಮನಗರ ತಾಲ್ಲೂಕಿನ ರಾಮದೇವರ ಬೆಟ್ಟ, ಕನಕಪುರ ತಾಲ್ಲೂಕಿನ ಸಂಗಮ, ಮೇಕೆದಾಟು, ಚುಂಚಿ ಜಲಪಾತ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಈ ಪ್ರದೇಶಗಳಿಗೆ ಡಿ. 31ರಂದು ಸಂಜೆ 6 ಗಂಟೆಯಿಂದ ಜ. 1ರಂದು ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಅಲ್ಲದೆ ಜಿಲ್ಲೆ ವ್ಯಾಪ್ತಿಯ ಎಲ್ಲಾ ರೆಸಾರ್ಟ್, ಹೋಟೆಲ್, ಹೋಂ ಸ್ಟೇ, ಇನ್ನಿತರ ಪ್ರದೇಶಗಳಲ್ಲಿ ಜ. 1ರಂದು ಬೆಳಗಿನ ಜಾವ 12.30 ಗಂಟೆಯಿಂದ ಬೆಳಿಗ್ಗೆ 6ಗಂಟೆವರೆಗೆ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮ ಅಥವಾ ಚಟುವಟಿಕೆಗಳನ್ನು ನಡೆಸದಂತೆ ನಿಷೇದಾಜ್ಞೆ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.