ADVERTISEMENT

ಮೈತ್ರಿ ಶಕ್ತಿ ಪ್ರದರ್ಶನಕ್ಕೆ ಭರ್ಜರಿ ತಯಾರಿ

ಇಂದು ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2024, 7:39 IST
Last Updated 4 ಏಪ್ರಿಲ್ 2024, 7:39 IST
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ಗುರುವಾರ ನಾಮಪತ್ರ  ಸಲ್ಲಿಸಿದ ಬಳಿಕ ನಡೆಯುವ ಬಹಿರಂಗ ಪ್ರಚಾರ ಸಭೆಗೆ, ನಗರದ ಹಳೆ ಚಾಮುಂಡೇಶ್ವರಿ ಸಿಲ್ಕ್ ಮಿಲ್ಕ್ ಜಾಗದಲ್ಲಿ ಬೃಹತ್ ಟೆಂಟ್ ಹಾಕಲಾಗಿದೆ
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ಗುರುವಾರ ನಾಮಪತ್ರ  ಸಲ್ಲಿಸಿದ ಬಳಿಕ ನಡೆಯುವ ಬಹಿರಂಗ ಪ್ರಚಾರ ಸಭೆಗೆ, ನಗರದ ಹಳೆ ಚಾಮುಂಡೇಶ್ವರಿ ಸಿಲ್ಕ್ ಮಿಲ್ಕ್ ಜಾಗದಲ್ಲಿ ಬೃಹತ್ ಟೆಂಟ್ ಹಾಕಲಾಗಿದೆ   

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಇದೇ ವೇಳೆ ಮೈತ್ರಕೂಟದ ಶಕ್ತಿ ಪ್ರದರ್ಶನಕ್ಕೂ ಭರ್ಜರಿ ತಯಾರಿ ನಡೆದಿದ್ದು, ಎರಡೂ ಪಕ್ಷಗಳ ನಾಯಕರು ರಾಮನಗರಕ್ಕೆ ಬರಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆಯುವ ಬಹಿರಂಗ ಪ್ರಚಾರ ಸಭೆಗೆ ನಗರದ ಹಳೆ ಚಾಮುಂಡೇಶ್ವರಿ ಸಿಲ್ಕ್ ಮಿಲ್ ಇದ್ದ ಜಾಗದಲ್ಲಿ ಬೃಹತ್ ಟೆಂಟ್ ಹಾಕಲಾಗಿದೆ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣಗೌಡ, ಶಾಸಕರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಮುನಿರತ್ನ, ಕೃಷ್ಣಪ್ಪ, ಜಿ.ಟಿ. ದೇವೇಗೌಡ, ನಟಿ ಶ್ರುತಿ ಸೇರಿದಂತೆ ಎರಡೂ ಪಕ್ಷಗಳ ಹಲವು ಜನಪ್ರತಿನಿಧಿಗಳು ಹಾಗೂ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಮುಂಚೆ, ಮಂಜುನಾಥ್ ಅವರು ನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೆಳಿಗ್ಗೆ 10 ಗಂಟೆಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಎಸ್‌ಪಿ ಕಚೇರಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ 11.30ರ ಸುಮಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿ ಮಧ್ಯಾಹ್ನ 12ರ ಸುಮಾರಿಗೆ ರಾಮನಗರಕ್ಕೆ ಬಂದು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಗ್ರಾಮಾಂತರ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಿಂದಲೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಾಮಪತ್ರ ಸಲ್ಲಿಕೆ ಮೆರವಣಿಗೆ ಮತ್ತು ಪ್ರಚಾರ ಸಭೆಯಲ್ಲಿ ಭಾಗವಹಿಸಲಾಗಿದೆ. ಅಂದಾಜು 35 ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆ ಇದ್ದು, ಟೆಂಟ್‌ನಲ್ಲಿ ಸುಮಾರು 30 ಸಾವಿರ ಕುರ್ಚಿಗಳನ್ನು ಹಾಕಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆನಂದಸ್ವಾಮಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.