ADVERTISEMENT

ರಾಮನಗರ | 76,322 ಮಕ್ಕಳಿಗೆ ಪೊಲಿಯೋ ಲಸಿಕೆ: ದಿಗ್ವಿಜಯ್

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 7:57 IST
Last Updated 29 ಫೆಬ್ರುವರಿ 2024, 7:57 IST
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಪೊಲಿಯೋ ಲಸಿಕೆ ಕಾರ್ಯಕ್ರಮ –2024ರ ಭಿತ್ತಿ ಪತ್ರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಬಿಡುಗಡೆ ಮಾಡಿದರು
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಪೊಲಿಯೋ ಲಸಿಕೆ ಕಾರ್ಯಕ್ರಮ –2024ರ ಭಿತ್ತಿ ಪತ್ರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಬಿಡುಗಡೆ ಮಾಡಿದರು   

ರಾಮನಗರ: ಜಿಲ್ಲೆಯಾದ್ಯಂತ ಮಾರ್ಚ್ 3ರಿಂದ 6ವರೆಗೆ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಈ ಸಲ ಒಟ್ಟು 76,322 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಪೊಲಿಯೋ ಲಸಿಕೆ ಕಾರ್ಯಕ್ರಮ –2024ರ ಭಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿದರು.

ಎಲ್ಲಾ ಮಕ್ಕಳಿಗೆ ನಿರ್ದಿಷ್ಟ ವಯಸ್ಸಿನಲ್ಲಿ ಲಸಿಕೆ ಹಾಕವುದರಿಂದ, ಅವರು ಪೊಲಿಯೋಗೆ ತುತ್ತಾಗುವುದನ್ನು ತಪ್ಪಿಸಬಹುದು. ಮಕ್ಕಳ ತಂದೆ–ತಾಯಿ ಸಹ ತಮ್ಮ ಮಗುವಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದರು.

ADVERTISEMENT

ಜಿಲ್ಲೆಯಲ್ಲಿ ಐದು ವರ್ಷದೊಳಗಿನ 76,322 ಮಕ್ಕಳಿದ್ದಾರೆ. ಈ ಪೈಕಿ ಚನ್ನಪಟ್ಟಣದಲ್ಲಿ 19,242, ಕನಕಪುರ 22,325, ಮಾಗಡಿ 12,634 ಹಾಗೂ ರಾಮನಗರದಲ್ಲಿ 22,121 ಮಕ್ಕಳಿದ್ದಾರೆ. ಎಲ್ಲರಿಗೂ ಲಸಿಕೆ ಹಾಕಲು ತಯಾರಿ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪೋಷಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್ ತಿಳಿಸಿದರು.

ಪೊಲಿಯೋ ಲಸಿಕೆ ಕಾರ್ಯಕ್ರಮ ಒಂದನೇ ದಿನ ಬೂತ್‌ಗಳಲ್ಲಿ, ನಂತರ ಗ್ರಾಮೀಣ ಪ್ರದೇಶದಲ್ಲಿ ಮೂರು ದಿನ ಹಾಗೂ ನಗರ ಪ್ರದೇಶಗಳಲ್ಲಿ ನಾಲ್ಕು ದಿನಗಳವರೆಗೆ ನಡೆಯಲಿದೆ. ಆರೋಗ್ಯ ಸಿಬ್ಬಂದಿ, ಆಶಾ –ಅಂಗನವಾಡಿ ಕಾರ್ಯಕರ್ತೆಯರು ಮನೆ-ಮನೆ ಭೇಟಿ ಮಾಡಿ ಬೂತ್‌ಗಳಲ್ಲಿ ಲಸಿಕೆ ಪಡೆಯದೇ ಇರುವ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುತ್ತಾರೆ ಎಂದು ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ರಾಜು ಹೇಳಿದರು.

ರೈಲು ನಿಲ್ದಾಣ, ಬಸ್ ನಿಲ್ದಾಣ, ವಲಸೆ ಜನರು ವಾಸಿಸುವ ಪ್ರದೇಶಗಳು, ಇಟ್ಟಿಗೆ ಮತ್ತು ಬ್ರಿಕ್ಸ್ ಫ್ಯಾಕ್ಟರಿ, ಮಾರುಕಟ್ಟೆ ಇನ್ನಿತರೆ ಪ್ರದೇಶಗಳಲ್ಲಿ ವಿಶೇಷ ತಂಡಗಳ ಮೂಲಕ ಅರ್ಹ ಮಕ್ಕಳಿಗೆ ಲಸಿಕೆ ನೀಡಲಾಗುವುದು. ನಮ್ಮ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಪೋಷಕರು, ಸಂಘ ಸಂಸ್ಥೆಗಳು ಸಹ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ರೋಟರಿ ಸಂಸ್ಥೆಯ ಅಧ್ಯಕ್ಷ ಕಾಂತರಾಜು, ಡಿ.ಪಿ.ಎಂ. ನಾಗೇಶ್, ಶಿಕ್ಷಣ ಇಲಾಖಾ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.

ಮಾರ್ಚ್ 3ರಿಂದ 6ವರೆಗೆ ಪೊಲಿಯೋ ಲಸಿಕೆ ಕಾರ್ಯಕ್ರಮ ಸಾರ್ವಜನಿಕ ಸ್ಥಳಗಳಲ್ಲೂ ಕಾರ್ಯಕರ್ತರಿಂದ ಲಸಿಕೆ ಅಭಿಯಾನ ಕಾರ್ಯಕ್ರಮ ಯಶಸ್ಸಿಗೆ ಕೈ ಜೋಡಿಸಲು ಪೋಷಕರಿಗೆ  ಮನವಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.