ಕನಕಪುರ: ಭಾರತದ ಆಂತರಿಕ ವಿಚಾರಗಳನ್ನು ವಿದೇಶಗಳಲ್ಲಿ ಮಾತನಾಡಿದ ಹಾಗೂ ದೇಶದ ಬಗ್ಗೆ ಕೀಳು ಅಭಿಪ್ರಾಯ ಬಿತ್ತುತ್ತಿರುವ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಚನ್ನಬಸಪ್ಪ ವೃತ್ತದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದ ಬಿಜೆಪಿ ಪದಾಧಿಕಾರಿಗಳು, ಕೂಡಲೇ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಅಮೆರಿಕದಲ್ಲಿ ರಾಹುಲ್ ಗಾಂಧಿ ದೇಶದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಆಂತರಿಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿರುವುದು ಖಂಡನೀಯ. ಮುಂದೆ ದೇಶದಲ್ಲಿ ದಲಿತರ ಮೀಸಲಾತಿಯನ್ನು ತೆಗೆಯುವುದಾಗಿ ಹೇಳಿಕೆ ನೀಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಭಾವನೆಗಳಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಏಕತೆ, ಭದ್ರತೆ ಮತ್ತು ಗೌಪ್ಯತೆ ಬಗ್ಗೆ ಅವರು ಎಚ್ಚರಿಕೆ ವಹಿಸಬೇಕಿತ್ತು. ದೇಶದ ಬಗ್ಗೆ ಬೇಜವಾಬ್ದಾರಿಯುತವಾಗಿ ಮಾತನಾಡಿದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಸ್ಥಾನದಿಂದ ಮತ್ತು ವೈನಾಡು ಸಂಸದ ಸ್ಥಾನದಿಂದ ಈ ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ, ಮನವಿ ಪತ್ರವನ್ನು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದರು.
ಕನಕಪುರ ತಾಲ್ಲೂಕಿಗೆ ನೂತನ ತಹಶೀಲ್ದಾರ್ ಮಂಜುನಾಥ್ ಜಿ. ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ.ಪಿ.ಕುಮಾರ್, ನಗರ ಮಂಡಲ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು, ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.