ADVERTISEMENT

ರಾಮನಗರ: 21ರಿಂದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 2:36 IST
Last Updated 10 ಡಿಸೆಂಬರ್ 2025, 2:36 IST
<div class="paragraphs"><p>ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಪೋಲಿಯೊ ಅಭಿಯಾನದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದರು.</p></div>

ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಪೋಲಿಯೊ ಅಭಿಯಾನದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದರು.

   

ರಾಮನಗರ: ‘ಜಿಲ್ಲೆಯಾದ್ಯಂತ ಡಿ.21ರಿಂದ 24ರವರೆಗೆ ನಾಲ್ಕು ದಿನ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಅಭಿಯಾನ ನಡೆಯಲಿದೆ. ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕ್ರಮ ವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮದ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

‘ಲಸಿಕೆ ಅಭಿಯಾನವನ್ನು ಸಾರ್ವಜನಿಕ ಸ್ಥಳಗಳು, ಆಸ್ಪತ್ರೆ, ಅಂಗನವಾಡಿ ಕೇಂದ್ರ, ರೈಲು– ಬಸ್ ನಿಲ್ದಾಣಗಳಲ್ಲಿ, ಜಾತ್ರೆ-ಸಂತೆ ಸ್ಥಳಗಳಲ್ಲಿ ಹಾಗೂ ಪ್ರವಾಸಿ ತಾಣಗಳು, ವಂಡರ್‌ಲಾ ಸೇರಿದಂತೆ ಜನರು ಹೆಚ್ಚಾಗಿ ಸೇರುವ ಕಡೆ ಲಸಿಕೆಗಳನ್ನು ಹಾಕಲು ಬೂತ್‌ಗಳನ್ನು ರಚಿಸಬೇಕು’ ಎಂದು ಸಲಹೆ ನೀಡಿದರು.

‘ಸಾರ್ವಜನಿಕ ಸ್ಥಳಗಳ ಜೊತೆಗೆ ಮನೆ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ಹಾಕಬೇಕು. ಶಾಲಾ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳಿಂದ 5 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಪಡೆಯಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ವಲಸೆ ಬಂದ ಕಾರ್ಮಿಕರ ಮಕ್ಕಳು ಮತ್ತು ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವವರ ಮಕ್ಕಳನ್ನು ಪತ್ತೆಹಚ್ಚಿ ಲಸಿಕೆ ಹಾಕಬೇಕು. ಒಂದು ವೇಳೆ ಲಸಿಕೆಯಿಂದ ವಂಚಿತರಾಗಿದ್ದರೆ, ಆ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಬೇಕು’ ಎಂದರು.

ಅಭಿಯಾನದ ಕುರಿತು ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ವ್ಯಾಪಕ ಪ್ರಚಾರಕ್ಕೆ ಸೂಚನೆ
ಪಲ್ಸ್ ಪೋಲಿಯೊ ಅಭಿಯಾನದ ಕುರಿತು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಪ್ರಚಾರ ಮಾಡಬೇಕು.  ಆಟೊಗಳಲ್ಲಿ ಎರಡು ದಿನ ಮುಂಚಿತವಾಗಿ ಪ್ರಚಾರಕ್ಕೆ ಕ್ರಮ ಕೈಗೊಳ್ಳಬೇಕು. ಬ್ಯಾನರ್‌ಗಳು, ಕರಪತ್ರಗಳನ್ನು ಮುದ್ರಿಸಿ ಪೋಲಿಯೋ ಲಸಿಕೆ ಹಾಕಿಸುವಂತೆ ಹಾಗೂ ಶಾಲಾ ಮಕ್ಕಳಿಂದ ಜಾಥಾ ಆಯೋಜಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಎಲ್ಲಾ ಬೂತ್‌ಗಳಲ್ಲಿ ಲಸಿಕೆ ಹಾಕಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಅಭಿಯಾನದ ಸಂದರ್ಭದಲ್ಲಿ ವಿದ್ಯುತ್ ಅಡಚಣೆಯಾಗದಂತೆ ಬೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.