ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕಿನಲ್ಲಿ ₹ 500 ಕೋಟಿ ಅಂದಾಜುವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಬೊಂಬೆನಾಡಿನ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸರ್ಕಾರದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ತಾಲ್ಲೂಕನ್ನು ಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಕಾಮಗಾರಿಗಳು ಶೀಘ್ರ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ತಾಲ್ಲೂಕಿನಲ್ಲಿ ಪ್ರಸ್ತುತ ಶಾಸಕರಿಲ್ಲ. ಈ ಕೊರತೆ ನೀಗಿಸಲು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಸಚಿವರು ತಾಲ್ಲೂಕಿನ ಜನ ಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಪರಿಹಾರಕ್ಕೆ ಶ್ರಮಿಸುತ್ತಿದ್ದಾರೆ. ವಿವಿಧ ಕಾರ್ಯಕ್ರಮಗಳ ಮೂಲಕ ತಾಲ್ಲೂಕಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ತಾಲ್ಲೂಕಿನಲ್ಲಿ ರಸ್ತೆ, ಮನೆ, ಚರಂಡಿ ಸಮಸ್ಯೆ, ಕುಡಿಯುವ ನೀರು, ನಿವೇಶನ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದೆ. ವಸತಿ ಇಲ್ಲದವರಿಗೆ ವಸತಿ ನೀಡಲಾಗುವುದು ಎಂದರು.
ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪ್ರಮೋದ್, ತಿಟ್ಟಮಾರನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಜಿ.ಸಿ. ಚಂದ್ರಕಲಾ, ತಾಲ್ಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ರಂಗನಾಥ್, ಉಪಾಧ್ಯಕ್ಷ ಅಕ್ಕೂರು ಶೇಖರ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿ.ಪಂ. ಸಿಇಒ ದಿಗ್ವಿಜಯ್ ಬೋಡ್ಕೆ, ತಹಶೀಲ್ದಾರ್ ನರಸಿಂಹ ಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್, ಮುಖಂಡರಾದ ಡಿ.ಕೆ. ಕಾಂತರಾಜ್, ದುಂತೂರು ವಿಶ್ವನಾಥ್ ಇತರರು ಭಾಗವಹಿಸಿದ್ದರು.
ನಂತರ ಸಚಿವರು ತಿಟ್ಟಮಾರನಹಳ್ಳಿ ಕಳ್ಳಿಹೊಸೂರು ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ, ಮೈಲನಾಯಕನ ಹೊಸಹಳ್ಳಿ ದೇವಸ್ಥಾನ ಕಾಮಗಾರಿಗೆ, ಹರೂರು ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ, ಅಬ್ಬೂರುದೊಡ್ಡಿ ಮುಖ್ಯರಸ್ತೆ ಅಭಿವೃದ್ಧಿಗೆ, ಅಬ್ಬೂರು ಬಳಿ ಕಣ್ವನದಿಯ ಸೇತುವೆ ಕಾಮಗಾರಿಗೆ ಹಾಗೂ ವಿವಿಧ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.