ADVERTISEMENT

ರಾಮನಗರ: ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲು ಸಲಹೆ

ಶಾಲೆ, ವಸತಿ ನಿಲಯಗಳ ಭೇಟಿ ವೇಳೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಲಹೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 8:31 IST
Last Updated 3 ಡಿಸೆಂಬರ್ 2025, 8:31 IST
ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಊಟ ಸವಿಸಿದರು. ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ, ಡಿಸಿಪಿಒ ರಜನಿ, ಜೈಲರ್ ಇಮಾಂ ಖಾಸಿಂ ಇದ್ದರು
ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಊಟ ಸವಿಸಿದರು. ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ, ಡಿಸಿಪಿಒ ರಜನಿ, ಜೈಲರ್ ಇಮಾಂ ಖಾಸಿಂ ಇದ್ದರು   

ರಾಮನಗರ: ಮಕ್ಕಳಿಗೆ ಉತ್ತಮ ಶಿಕ್ಷಣ, ಆಹಾರ, ಆರೋಗ್ಯ, ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರವು ಹಲವಾರು ಸೌಲಭ್ಯಗಳನ್ನು ಕಲ್ಪಿಸಿದೆ. ಜಿಲ್ಲೆಯ ಸರ್ಕಾರಿ ಶಾಲೆಗಳು, ವಸತಿ ನಿಲಯಗಳಲ್ಲಿ ಮಕ್ಕಳ ಸಂಪೂರ್ಣ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಸೂಚನೆ ನೀಡಿದರು. 

ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಅವರೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲಾ ಪ್ರವಾಸ ಕೈಗೊಳ್ಳಲಾಗಿತ್ತು. ರಾಮನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಭೇಟಿ ನೀಡಿ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲಾಯಿತು ಎಂದು ಹೇಳಿದರು.

ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ 197 ಮಕ್ಕಳಿದ್ದು, ಒಂದು ಕೊಠಡಿಯಲ್ಲಿ 50 ಮಕ್ಕಳಿದ್ದಾರೆ. ಇದರಿಂದಾಗಿ ಅವರು ಇಕ್ಕಟ್ಟಿನ ಸ್ಥಳದಲ್ಲಿ ಮಲಗುತ್ತಿದ್ದಾರೆ. ಈ ಮಕ್ಕಳಿಗೆ ಆಟದ ಮೈದಾನವೂ ಇಲ್ಲ. ಒಟ್ಟಾರೆ ಮಕ್ಕಳು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮಕ್ಕಳ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ವಸತಿ ನಿಲಯದ ಸ್ವಂತ ಕಟ್ಟಡದ ಕಾಮಗಾರಿ ಶೀಘ್ರವೇ ಪ್ರಾರಂಭಿಸಲು ಕ್ರಮ ವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು. ಅಲ್ಲದೆ, ಈ ಸಂಬಂಧ ಮೂರು ದಿನಗಳಲ್ಲಿ ವಿಸ್ತೃತ ವರದಿ ನೀಡಬೇಕು ಎಂದು ಹೇಳಿದರು. 

ADVERTISEMENT

ಅಧಿಕಾರಿಗಳು ನಿಯಮಿತವಾಗಿ ವಸತಿ ನಿಲಯಗಳಿಗೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರ, ವಸತಿ ಸೌಲಭ್ಯಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು. 

ಚನ್ನಪಟ್ಟಣದ ಪುರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ಮಕ್ಕಳ ವಿಶೇಷ ಮಕ್ಕಳ ರಕ್ಷಣಾ ಘಟಕವಿರಬೇಕು ಎಂದು ಸೂಚಿಸಿದರು.

ಮಕ್ಕಳ ವಿಶೇಷ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸಹಾಯಕರು ಇರಬೇಕು. ಮಕ್ಕಳ ಪ್ರತ್ಯೇಕ ದಾಖಲೆ ನಿರ್ವಹಿಸಬೇಕು. ಮಕ್ಕಳ ರಕ್ಷಣೆಗೆ ಇರುವ ಮಕ್ಕಳ ಸುರಕ್ಷತಾ ಕಾಯ್ದೆ, ಬಾಲನ್ಯಾಯ ಕಾಯ್ದೆಗಳ ಮಾಹಿತಿ ನೀಡಬೇಕು. ಮಕ್ಕಳ ಸಹಾಯವಾಣಿ ಸಂಖ್ಯೆ 1098 ಭಿತ್ತಿಪತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಮಕ್ಕಳ ಹಕ್ಕುಗಳು ಹಾಗೂ ಪೋಕ್ಸೊ ಕಾಯ್ದೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಲು ಶಾಲೆಗಳಲ್ಲಿ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮ ಆಯೋಜಿಸಬೇಕು. ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಚನ್ನಪಟ್ಟಣದ ಪಟ್ಟಾ ಬಡಾವಣೆಯಲ್ಲಿರುವ ಕನ್ನಡ ಮಾಧ್ಯಮ ಶಾಲೆಗೆ ಭೇಟಿ ನೀಡಿದ ಅವರು, ಈ ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ. ಮಕ್ಕಳಿಗೆ ರಕ್ಷಣೆಯಿಲ್ಲದ ಕಟ್ಟಡದಲ್ಲಿ ಪಾಠ–ಪ್ರವಚ ನಡೆಯುತ್ತಿರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದರು.

ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡದಲ್ಲಿ ಪಾಠ–ಪ್ರವಚನ ಮಾಡಬಾರದು. ಸರ್ಕಾರದ ಸುತ್ತೋಲೆಯನ್ನು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ನೂತನ ಕಟ್ಟಡ ನಿರ್ಮಿಸಲು ಕ್ರಮ ಕೈಗೊಂಡು ಮಕ್ಕಳಿಗೆ ಸುರಕ್ಷಿತ ಸ್ಥಳದಲ್ಲಿ ಶಿಕ್ಷಣ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ದೇವಾಲಯಗಳ ಮುಂಭಾಗದಲ್ಲಿ, ಸಂಚಾರ ಸಿಗ್ನಲ್‌ಗಳಲ್ಲಿ ಅಥವಾ ಇತರೆ ಸ್ಥಳಗಳಲ್ಲಿ ಮಕ್ಕಳು ಭಿಕ್ಷೆ ಬೇಡುವುದು ಕಂಡುಬಂದಲ್ಲಿ, ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ತಂಡಗಳು ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿ, ಭಿಕ್ಷಾಟನೆ ಮಾಡುತ್ತಿರುವ ಮಕ್ಕಳನ್ನು ರಕ್ಷಣೆ ಮಾಡಿ ಸಮಾಜ ಕಲ್ಯಾಣ ಇಲಾಖೆಯ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸಬೇಕು. ಮಕ್ಕಳು ಮತ್ತು ಪೋಷಕರಿಗೆ ಆಪ್ತ ಸಮಾಲೋಚನೆ ನಡೆಸಬೇಕು. ಶಿಕ್ಷಣ ನೀಡಲು ಕ್ರಮ ವಹಿಸಬೇಕು ಎಂದು ನಿರ್ದೇಶಿಸಲಾಗಿದೆ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಮಕ್ಕಳ ರಕ್ಷಣಾಧಿಕಾರಿ ರಜನಿ ಉಪಸ್ಥಿತರಿದ್ದರು.

ಈ ವೇಳೆ ಡಿವೈಎಸ್‌ಪಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿದೇಶಕ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಲಕ್ಷ್ಮಿದೇವಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜನಿ, ಶಾಲಾ ಶಿಕ್ಷಣ ಇಲಾಖೆಯ ಚನ್ನಪಟ್ಟಣ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ಕಾರಾಗೃಹಕ್ಕೆ ಭೇಟಿ

ಕಾರಾಗೃಹದಲ್ಲಿರುವ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಜಿಲ್ಲಾ ಕಾರಾಗೃಹದಲ್ಲಿ ಒಟ್ಟು 267 ಕೈದಿಗಳಿದ್ದು ಇದರಲ್ಲಿ ಪೋಕ್ಸೊ ಕಾಯ್ದೆಯಡಿ 57 ಕೈದಿಗಳಿದ್ದಾರೆ. 18ರಿಂದ 21 ವರ್ಷ ವಯಸ್ಸಿನ 38 ಕೈದಿಗಳಿದ್ದಾರೆ ಎಂದು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಹೇಳಿದರು.  18 ವರ್ಷದೊಳಗಿನ ಹಾಗೂ ಮಹಿಳಾ ಕೈದಿಗಳಿಲ್ಲ. ಕೈದಿಗಳನ್ನು ಭೇಟಿ ಮಾಡಿದ ಅವರು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರಾಗೃಹದಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಅಡುಗೆಕೋಣೆ ಪರಿಶೀಲಿಸಿದರು. ಕೈದಿಗಳಿಗೆ ನೀಡಲಾಗುವ ಆಹಾರ ಸವಿದರು. ಕೈದಿಗಳಿಗೆ ಉತ್ತಮ ಆಹಾರ ನೀಡಲಾಗುತ್ತಿದೆ. ವಾರಕ್ಕೆ ಎರಡು ಬಾರಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಹೊರ ರಾಜ್ಯದ ಕೈದಿಗಳು ಕನ್ನಡ ಭಾಷೆ ಕಲಿತಿರುವುದು ಶ್ಲಾಘನೀಯ ಎಂದರು. 267 ಕೈದಿಗಳಲ್ಲಿ 36 ಕೈದಿಗಳು ಅನಕ್ಷರಸ್ಥರಾಗಿದ್ದು ಅವರಿಗೆ ಶಿಕ್ಷಕರಿಂದ ಅಕ್ಷರ ಜ್ಞಾನ ನೀಡುತ್ತಿರುವುದು ಉತ್ತಮ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರಾಗೃಹ ಅಧಿಕಾರಿಗಳಾದ ರಾಕೇಶ್ ಕಾಂಬ್ಳೆ ಹಾಗೂ ಇಮಾಮ್ ಖಾಸಿಂ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.