ADVERTISEMENT

ಸಿ.ಎಂ ಹುದ್ದೆ | ಮುಂದೆ ಒಳ್ಳೆ ದಿನ ಬರಲಿವೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 4 ಜೂನ್ 2023, 8:01 IST
Last Updated 4 ಜೂನ್ 2023, 8:01 IST
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಸೇಬಿನ ಬೃಹತ್ ಹಾರ ಹಾಕಿ ಸ್ವಾಗತಿಸಿದರು
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಸೇಬಿನ ಬೃಹತ್ ಹಾರ ಹಾಕಿ ಸ್ವಾಗತಿಸಿದರು    

ರಾಮನಗರ: ‘ನನ್ನನ್ನು ಮುಖ್ಯಮಂತ್ರಿ ಮಾಡಬೇಕು ಅಂತ ನೀವು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿದ್ರಿ. ಹೈಕಮಾಂಡ್ ಉಪಮುಖ್ಯಮಂತ್ರಿ ಜವಾಬ್ದಾರಿ ನೀಡಿತು. ಇದರಿಂದ ಯಾರೂ ನಿರಾಶರಾಗಬೇಕಿಲ್ಲ. ‌ಮುಂದೆ ಒಳ್ಳೆಯ ದಿನಗಳು ಬರಲಿವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕನಕಪುರ ತಾಲ್ಲೂಕಿನ ಕಲ್ಲಹಳ್ಳಿ, ಹಾರೋಹಳ್ಳಿ ಸೇರಿದಂತೆ ವಿವಿಧೆಡೆ ಶನಿವಾರ ಹಮ್ಮಿಕೊಂಡಿದ್ದ ಮತದಾರರು, ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯರು ಹೇಳಿದ ಕಿವಿಮಾತು ಕೇಳಿ ಈ ಜವಾಬ್ದಾರಿ ಒಪ್ಪಿಕೊಂಡೆ’ ಎಂದರು.

ADVERTISEMENT

‘ಪಕ್ಷ ನನಗೆ ಮೋಸ ಮಾಡುವುದಿಲ್ಲ. ಸರಿಯಾದ ಸಮಯದಲ್ಲಿ ಎಐಸಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಮುಂದೆ ಮುಖ್ಯಮಂತ್ರಿ ಸ್ಥಾನ ನೀಡೇ ನೀಡುತ್ತದೆ. ನಿಮ್ಮ ನಿರೀಕ್ಷೆ ಎಂದಿಗೂ ಹುಸಿಯಾಗುವುದಿಲ್ಲ. ಅದಕ್ಕಾಗಿ, ನಾವು ಶಾಂತಿ ಮತ್ತು ಶ್ರದ್ಧೆಯಿಂದ ಕೆಲಸ ಮಾಡಬೇಕಿದೆ’ ಎಂದರು.

‘ಮುಂದಿನ ದಿನಗಳಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಅದಕ್ಕೆ ಈಗಿನಿಂದಲೇ ಸಿದ್ಧರಾಗಬೇಕು’ ಎಂದು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಆದ ಬಳಿಕ ಮೊದಲ ಸಲ ತವರು ಕ್ಷೇತ್ರಕ್ಕೆ ಬಂದ ಶಿವಕುಮಾರ್ ಅವರನ್ನು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಿದರು. ಸೇಬು, ಕ್ಯಾಪ್ಸಿಕಂ ಹಾಗೂ ಹೂವಿನ ಬೃಹತ್ ಹಾರ ಹಾಕಿ ಸ್ವಾಗತಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ‘ಮಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಯವಾಗಲಿ’ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.

ಕಬ್ಬಾಳು ಗ್ರಾಮದಲ್ಲಿ ತಮ್ಮ ಕುಲದೇವತೆ ಕಬ್ಬಾಳಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಿವಕುಮಾರ್‌, 101 ಈಡುಗಾಯಿ ಒಡೆದು ಹರಕೆ ತೀರಿಸಿದರು. ದಿನವಿಡೀ ವಿವಿಧೆಡೆ ಸಂಚರಿಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. 

ದಬ್ಬಾಳಿಕೆ ಬೇಡ: ‘ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ ಎಂದು ಇತರ ಪಕ್ಷಗಳ ಮೇಲೆ ದಬ್ಬಾಳಿಕೆ ಮಾಡಬೇಡಿ. ಯಾರ ಜೊತೆಯೂ ಜೋರಾಗಿ ಮಾತನಾಡಬೇಡಿ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಜೆಡಿಎಸ್ ಹಾಗೂ ಬಿಜೆಪಿಯವರನ್ನು ಅಣಕಿಸಬಾರದು. ಚುನಾವಣೆ ಸಂದರ್ಭದಲ್ಲೇ ಎಲ್ಲವೂ ಮುಗಿಯಿತು. ಇನ್ನು ಮುಂದೆ ಶಾಂತಿಯಿಂದ ವರ್ತಿಸಬೇಕು. ನಿಮ್ಮ ನಡುವೆ ಭಿನ್ನಾಭಿಪ್ರಾಯ ತರುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಬೇರೆ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಕು’ ಎಂದು ಕಾರ್ಯಕರ್ತರಿಗೆ ಶಿವಕುಮಾರ್ ಕಿವಿಮಾತು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.