ಚನ್ನಪಟ್ಟಣ: ಗ್ರಾಮೀಣ ಭಾಗದಲ್ಲಿ ಒತ್ತುವರಿಯಾಗಿರುವ ಕೆರೆಗಳು, ಸರ್ಕಾರಿ ಜಾಗ, ರಸ್ತೆಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದ್ದು, ಹಂತಹಂತವಾಗಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ತಾಲ್ಲೂಕಿನ ಕೂಡ್ಲೂರು ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ಬಹುತೇಕ ಕಡೆಗಳಲ್ಲಿ ಕೆರೆಗಳ ಒತ್ತುವರಿ ಸಾಮಾನ್ಯವಾಗಿದೆ. ಸರ್ಕಾರಿ ಜಾಗಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಇದನ್ನು ಮನಗಂಡು ಒತ್ತುವರಿ ತೆರವು ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು.
ಒತ್ತುವರಿಯಾಗಿರುವ ಸರ್ಕಾರಿ ಜಾಗಗಳನ್ನು ಗುರುತಿಸಿ ಒತ್ತುವರಿ ತೆರವು ಮಾಡಿ ಆನಂತರ ಮನೆಗಳಿಲ್ಲದ ಬಡವರಿಗೆ ಹಂಚಿಕೆ ಮಾಡಲು ಯೋಜನೆ ರೂಪಿಸಲಾಗಿದೆ. ಮೊದಲು ಅಂತಹ ಜಾಗಗಳನ್ನು ಗುರ್ತಿಸುವ ಕೆಲಸವಾಗಬೇಕು. ಜೊತೆಗೆ ಸಾರ್ವಜನಿಕ ರಸ್ತೆಗಳ ಒತ್ತುವರಿ ಬಗ್ಗೆ ಹಲವಾರು ಆರೋಪಗಳು ಬಂದಿವೆ. ಆ ಕಾರ್ಯವನ್ನು ಸಹ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜನತೆಯ ಸಮಸ್ಯೆಗಳನ್ನು ಅವರಿರುವ ಕಡೆಗಳಲ್ಲೇ ಸರಿಪಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹರಿಸಲಾಗುವುದು, ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದರು.
ತಾ.ಪಂ. ಇಒ ಶಿವಕುಮಾರ್, ಪಿಡಿಒ ಪದ್ಮಾ, ಗ್ರಾಮ ಲೆಕ್ಕಾಧಿಕಾರಿಗಳಾದ ಪುಟ್ಟಸ್ವಾಮಿ, ವಿದ್ಯಾ, ಜಿ.ಪಂ. ಎಇಇ ಶಂಕರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುನಿಲ್ ಕುಮಾರ್, ಪ್ರಮೋದ್, ಮಾಜಿ ಶಾಸಕ ಎಂ.ಸಿ.ಅಶ್ವತ್ಥ್, ಮುಖಂಡರಾದ ಡಿ.ಎಂ.ವಿಶ್ವನಾಥ್, ಡಿ.ಆರ್.ಭಗತ್ ರಾಮ್, ಡಿ.ಕೆ.ಕಾಂತರಾಜು, ಚಂದ್ರಸಾಗರ್, ವೆಂಕಟೇಶ್, ಶ್ರೀನಿವಾಸ್ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.