ADVERTISEMENT

ರಾಮನಗರ | ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಸತೀಶ್

ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 5:52 IST
Last Updated 28 ಜನವರಿ 2026, 5:52 IST
ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್ ಉದ್ಘಾಟಿಸಿದರು. ತಹಶೀಲ್ದಾರ್ ತೇಜಸ್ವಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸೋಮಲಿಂಗಯ್ಯ, ಸರ್ಕಲ್ ಇನ್‌ಸ್ಪೆಕ್ಟರ್ ಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಹಾಗೂ ಇತರರು ಇದ್ದಾರೆ
ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್ ಉದ್ಘಾಟಿಸಿದರು. ತಹಶೀಲ್ದಾರ್ ತೇಜಸ್ವಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸೋಮಲಿಂಗಯ್ಯ, ಸರ್ಕಲ್ ಇನ್‌ಸ್ಪೆಕ್ಟರ್ ಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಹಾಗೂ ಇತರರು ಇದ್ದಾರೆ   

ರಾಮನಗರ: ‘ಸರ್ಕಾರಿ ನೌಕರರು ಒತ್ತಡಗಳಲ್ಲಿ ಕೆಲಸ ನಿರ್ವಹಿಸುತ್ತಿರುತ್ತಾರೆ. ಅವರ ಮಾನಸಿಕ ಹಾಗೂ ದೈಹಿಕ ಒತ್ತಡ ನಿವಾರಣೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿದೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಕೆ. ಸತೀಶ್ ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ದಕ್ಷಿಣ ಜಿಲ್ಲಾ ಶಾಖೆಯು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಸರ್ಕಾರಿ ನೌಕರರ ರಾಮನಗರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

‘ನೌಕರರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯ ಸರ್ಕಾರ ಪ್ರತಿ ವರ್ಷ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಇದರಿಂದ ಸರ್ಕಾರಿ ನೌಕರರ ಪ್ರತಿಭೆ ಪ್ರದರ್ಶನಕ್ಕೂ ಅವಕಾಶ ಸಿಗಲಿದೆ. ಎಲ್ಲಾ ಸರ್ಕಾರಿ ನೌಕರರು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು’ ಎಂದರು.

ADVERTISEMENT

‘ರಾಜ್ಯದಲ್ಲಿ ಸಾಕಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ಸರ್ಕಾರದ ಯಾವುದೇ ಕೆಲಸ–ಕಾರ್ಯಗಳಿಗೆ ತೊಂದರೆಯಾಗದಂತೆ ಸರ್ಕಾರಿ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲರಿಗೂ ಆರೋಗ್ಯ ಚನ್ನಾಗಿದ್ದರಷ್ಟೇ ಕೆಲಸ ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆ ಗಮನಹರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಸರ್ಕಾರಿ ನೌಕರರ ನಿರೀಕ್ಷೆಯಂತೆ 7ನೇ ವೇತನ ಆಯೋಗ ಜಾರಿಗೆ ಬಂದಿದೆ. ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್) ರದದಾಗಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಬಂದರೆ ಎಲ್ಲಾ ನೌಕರರರು ತಮ್ಮ ಸಂಧ್ಯಾ ಕಾಲದಲ್ಲಿ ಮಕ್ಕಳು, ಮೊಮ್ಮಕ್ಕಳ ಬಳಿ ಕೈ ಚಾಚದೆ ತಮ್ಮ ಜೀವನವನ್ನು ತಾವೇ ನೋಡಿಕೊಳ್ಳಬಹುದು’ ಎಂದು ಹೇಳಿದರು.

‘ಈ ಕಾರಣಕ್ಕಾಗಿ ಸರ್ಕಾರಕ್ಕೆ ಒಪಿಎಸ್ ಜಾರಿ ಮಾಡುವಂತೆ ಮನವಿ ಸಲ್ಲಿಸಿ ಒತ್ತಾಯಿಸುತ್ತಾ ಬರಲಾಗಿದೆ. ಈ ವರ್ಷ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸಿ ಜಾರಿಗೆ ತರುವ ನಿರೀಕ್ಷೆ ಇದೆ. ಇದಾದರೆ, ನಮ್ಮ ಬಹು ದಿನಗಳ ಬೇಡಿಕೆ ಈಡೇರಿದಂತಾಗುತ್ತದೆ’ ಎಂದು ತಿಳಿಸಿದರು.

ತಹಶೀಲ್ದಾರ್ ತೇಜಸ್ವಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸೋಮಲಿಂಗಯ್ಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಕಾಂತರಾಜು ಮಾತನಾಡಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಸತೀಶ್ ಪಾದ್ರಳ್ಳಿ ಸ್ವಾಗತಿಸಿ, ವಂದಿಸಿದರು.

ರಾಮನಗರದ ಸರ್ಕಲ್ ಇನ್‌ಸ್ಪೆಕ್ಟರ್ ಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕ ನೀಲಕಂಠಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ರಂಗಸ್ವಾಮಿ ಸೇರಿದಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ನೌಕರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.