
ಹಾರೋಹಳ್ಳಿ: ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಮಿತಿ ಸಭೆಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ಪಾಲ್ಗೊಂಡರು. ತಾಲೂಕಿನ ರೈತರು ಸಾಗುವಳಿ ಚೀಟಿ ಸಿಗುತ್ತದೆ ಎಂಬ ನಿರೀಕ್ಷೆಯಿಂದ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಹಲವು ಅರ್ಜಿಗಳು ತಿರಸ್ಕೃತವಾಗಿವೆ. ಬಹಳಷ್ಟು ಅರ್ಜಿಗಳು ಬಾಕಿ ಉಳಿದಿವೆ. ಇನ್ನೊಂದಷ್ಟು ಅರ್ಜಿಗಳು ಮಂಜೂರಾಗಿದ್ದರೂ ಸಹ ರೈತರಿಗೆ ಸಾಗುವಳಿ ನೀಡಿಲ್ಲ. ಹಕ್ಕುಪತ್ರ ನೀಡಿರುವವರಿಗೆ ಖಾತೆ ಮಾಡಿಕೊಟ್ಟಿಲ್ಲ. ಕೆಲವರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಆದರೆ, ಪಹಣಿ ಇಂಡೀಕರಣ ಆಗಿಲ್ಲ. ಹೀಗೆ ಸಾಲು ಸಾಲು ಸಮಸ್ಯೆಗಳು ಸಾಕಷ್ಟಿವೆ ಎಂದು ವಿವರಿಸಿದರು.
ಈ ನಿಟ್ಟಿನಲ್ಲಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಸಾರ್ವಜನಿಕರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈತರು ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದ ಸಮಯದಲ್ಲಿ ಯಾವುದೇ ನಗರಸಭೆ ಅಥವಾ ಬಿಬಿಎಂಪಿ ವ್ಯಾಪ್ತಿ ಇರಲಿಲ್ಲ ಎಂದು ತಿಳಿಸಿದ ಅವರು, ಸಚಿವರ ಬಳಿ ಕೂಲಂಕಷವಾಗಿ ಪರಿಶೀಲಿಸಿ ಅರ್ಜಿಗಳನ್ನು ಯಾವ ರೀತಿ ವಿಲೇವಾರಿ ಮಾಡಬಹುದೆಂದು ತೀರ್ಮಾನಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದರು.
ಸಾಗುವಳಿ ಚೀಟಿ ನೀಡುವ ವಿಷಯದಲ್ಲಿ ಎಲ್ಲರೂ ಉತ್ಸಾಹದಿಂದ ಕೆಲಸ ಮಾಡಬೇಕು. ಆಗ ಜನ ನಮ್ಮ ಕೆಲಸಗಳನ್ನು ಶ್ಲಾಘನೆ ಮಾಡಲಿದ್ದಾರೆ ಎಂದರು.
ಸಭೆಯಲ್ಲಿ ತಹಶೀಲ್ದಾರ್ ಹರ್ಷವರ್ಧನ್, ಬಗರ್ ಹುಕುಂ ಸಮಿತಿ ಸದಸ್ಯರಾದ ಸೌಭಾಗ್ಯಮ್ಮ, ರಾಮಕೃಷ್ಣ, ರಾಮಣ್ಣ ಸೇರಿದಂತೆ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.