ADVERTISEMENT

ರಾಮನಗರ| ಪ್ರೀತಿಸಿ ಮದುವೆಗೆ ನಿರಾಕರಿಸಿದ ಯುವಕ: ಮನನೊಂದು ಯುವತಿ ಆತ್ಮಹತ್ಯೆ ಯತ್ನ

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 5:32 IST
Last Updated 16 ಜನವರಿ 2026, 5:32 IST
   

ರಾಮನಗರ: ಪ್ರೀತಿಸಿದ ಯುವಕನೊಬ್ಬ ದೈಹಿಕ ಸಂಪರ್ಕ ಬೆಳೆಸಿ ನಂತರ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿಯೊಬ್ಬರು ನಗರದ ಮಹಿಳಾ ಪೊಲೀಸ್ ಠಾಣೆಯಿಂದ ಅನತಿ ದೂರದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಪೊಲೀಸರು ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕನಕಪುರ ತಾಲ್ಲೂಕಿನ ಅರುಣ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಗುರುವಾರ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಾಗಿದೆ.

ಕನಕಪುರ ತಾಲ್ಲೂಕಿನ ಯುವಕ–ಯುವತಿ ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಪ್ರೀತಿಸುತ್ತಿದ್ದ ಇಬ್ಬರೂ ಮದುವೆಗೂ ನಿರ್ಧರಿಸಿದ್ದರು. ಆದರೆ, ಯುವಕ ಮದುವೆಗೆ ನಿರಾಕರಿಸಿ ಅಂತರ ಕಾಯ್ದುಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.

ADVERTISEMENT

ಇದರಿಂದ ನೊಂದ ಯುವತಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಯುವಕನನ್ನು ಠಾಣೆಗೆ ಕರೆಯಿಸಿ ಬುದ್ಧಿಮಾತು ಹೇಳಿದ್ದೆವು. ಎಲ್ಲವನ್ನೂ ಸರಿಪಡಿಸಿಕೊಳ್ಳುವುದಾಗಿ ಇಬ್ಬರೂ ಹೇಳಿ ಹೋಗಿದ್ದರು. ಆದರೆ, ಯುವಕ ಮತ್ತೆ ತನ್ನ ಚಾಳಿ ಮುಂದುವರಿಸಿದ್ದ.

ಯುವಕನ ನಡೆಯಿಂದ ನೊಂದ ಯುವತಿ ಬುಧವಾರ ಮತ್ತೆ ಠಾಣೆಗೆ ಮೆಟ್ಟಿಲೇರಲು ನಿರ್ಧರಿಸಿದ್ದರು. ಅದಕ್ಕೆ ಮುಂಚೆ ತನ್ನೊಂದಿಗೆ ತಂದಿದ್ದ ನಿದ್ರೆಮಾತ್ರೆಗಳನ್ನು ಸೇವಿಸಿದ್ದರು. ಠಾಣೆಗೆ ಬಂದಾಗ ಅಸ್ವಸ್ಥರಾದಂತೆ ಕಂಡುಬಂದ ಯುವತಿಯನ್ನು ಸಿಬ್ಬಂದಿ ವಿಚಾರಿಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಗೊತ್ತಾಯಿತು. ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಿದರು ಎಂದು ಪೊಲೀಸರು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಮೇರೆಗೆ ಯುವಕನ ವಿರುದ್ಧ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಿಕೊಂಡು, ಯುವಕನ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.